ಕುಶಾಲನಗರ, ಜೂ. 6: ನದಿ ಪರಿಸರಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಸಂರಕ್ಷಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್ ಹೇಳಿದರು.ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಡಗು, ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ನಗರಸಭೆ ಮಡಿಕೇರಿ, ಪಟ್ಟಣ ಪಂಚಾಯತ್ ಕುಶಾಲನಗರ, ಕಾರ್ಯನಿರತ ಪತ್ರಕರ್ತರ ಸಂಘ ಕೊಡಗು, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕರ್ನಾಟಕ ರಾಜ್ಯವಿಜ್ಞಾನ ಪರಿಷತ್, ಗ್ರೀನ್ ಸಿಟಿ ಫೋರಂ ಕೊಡಗು ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯ ಕಾವೇರಿ ನದಿ ತಟದ ಬಳಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸ್ವಚ್ಛ ಕಾವೇರಿ ಹಾಗೂ ಸ್ವಚ್ಛ ಪರಿಸರಕ್ಕಾಗಿ ನಡಿಗೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಮನುಷ್ಯನ ಸ್ವಾರ್ಥದಿಂದಾಗಿ ನದಿ ಕಲುಷಿತಗೊಂಡು ಮಾಲಿನ್ಯಗೊಳ್ಳುತ್ತಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಕಾಪಾಡುವ ಮೂಲಕ ನದಿಗಳ ಪಾವಿತ್ರ್ಯತೆಗೆ ಮಹತ್ವ ನೀಡಬೇಕಿದೆ ಎಂದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಜಿ.ಆರ್. ಗಣೇಶನ್ ಮಾತನಾಡಿ, ಮೂಲ ಕಾವೇರಿಯ ಭಾಗದಲ್ಲಿ ನದಿ ನೀರು ಮಲಿನಗೊಳ್ಳುತ್ತಿದ್ದು, ಗುಣಮಟ್ಟ ಸಿ ದರ್ಜೆಗೆ ಇಳಿದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನೇರವಾಗಿ ನದಿಗೆ ರಾಸಾಯನಿಕ ವಸ್ತುಗಳು ಸೇರುತ್ತಿರುವದೇ ಇದಕ್ಕೆ ಪ್ರಮುಖ ಕಾರಣ ಎಂದರಲ್ಲದೆ, ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ಹರಿಯುವ ನೀರಿಗೆ ಯಾವದೇ ರೀತಿಯ ಕಲುಷಿತ ಸೇರ್ಪಡೆಗೊಳ್ಳದಂತೆ ನೋಡಿಕೊಳ್ಳುವಂತೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ಪ್ರಭು ಮಾತನಾಡಿ, ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರಕ್ಕೆ ಹಾನಿಯಾಗದಂತೆ ಎಚ್ಚರವಹಿಸಬೇಕೆಂದು ತಿಳಿಸಿದರು.
ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿಯಿಂದ ಕುಶಾಲನಗರದ ತನಕ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಮತ್ತು ಸಂಘ ಸಂಸ್ಥೆಗಳ ಕಾರ್ಯಕರ್ತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಲಿಂಗರಾಜು, ಕಾವೇರಿ ನದಿ ಜಾಗೃತಿ ಸಮಿತಿ ಅಧ್ಯಕ್ಷ ಟಿ.ಆರ್. ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕುಶಾಲನಗರ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷÀ ವಿ.ಎನ್. ವಸಂತಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಆರ್. ಶಿವಾನಂದ, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ. ಮನು, ಧಾರಾವಾಹಿ ನಿರ್ಮಾಪಕ ಉಮಾಶಂಕರ್, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಹಾಸನ ಜಿಲ್ಲಾ ಸಂಚಾಲಕ ಕುಮಾರಸ್ವಾಮಿ ಇದ್ದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕ ನುಡಿಗಳಾಡಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾಧ್ಯಕ್ಷ ಫಿಲಿಪ್ವಾಸ್ ಸ್ವಾಗತಿಸಿದರು, ಪಟ್ಟಣ ಪಂಚಾಯಿತಿ ಸದಸ್ಯ ನಂಜುಂಡಸ್ವಾಮಿ ಕಾರ್ಯಕ್ರಮ ನಿರೂಪಿಸಿದರೆ, ಉಪನ್ಯಾಸಕ ಮಹೇಂದ್ರ ವಂದಿಸಿದರು.