ಸೋಮವಾರಪೇಟೆ, ಜೂ. 9: ಸಮೀಪದ ಗೌಡಳ್ಳಿ ಗ್ರಾಮದ ಶ್ರೀ ನವದುರ್ಗಾಪರಮೇಶ್ವರಿ ದೇವಾಲಯ ಆವರಣದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನದ ಹೆಚ್ಚುವರಿ ಕಾಮಗಾರಿಗಳಿಗೆ ಸಂಸದರ ನಿಧಿಯಿಂದ ರೂ. 5 ಲಕ್ಷ ಅನುದಾನ ಒದಗಿಸಲಾಗುವದು ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು.ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ಕಲ್ಪಿಸಲಾಗುವದು ಎಂದರು. ಸಮುದಾಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಜಿ.ಎ. ಮಹೇಶ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಆರ್. ಮುತ್ತಣ್ಣ, ಯಕ್ಷಗಾನ ಸಮಿತಿ ಅಧ್ಯಕ್ಷ ಕೆ.ಜಿ. ದಿನೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿ.ಪಂ. ಸದಸ್ಯ ಬಿ. ಜೆ. ದೀಪಕ್, ತಾ.ಪಂ. ಸದಸ್ಯೆ ಕುಸುಮಾ ಅಶ್ವತ್, ಗೌಡಳ್ಳಿ ಗ್ರಾ.ಪಂ. ಅಧ್ಯಕ್ಷ ಧರ್ಮಾಚಾರಿ, ದೊಡ್ಡಮಳ್ತೆ ಗ್ರಾ.ಪಂ. ಅಧ್ಯಕ್ಷ ಎಸ್.ಡಿ. ದಿವಾಕರ್, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ. ಭರತ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವೈ. ಪ್ರಕಾಶ್, ದೇವಾಲಯ ಸಮಿತಿ ಕಾರ್ಯದರ್ಶಿ ಎ.ವಿ. ವಿಶ್ವರೂಪಚಾರ್ಯ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ದೇವಾಲಯದಲ್ಲಿ ಸತ್ಯನಾರಾಯಣ ಪೂಜೆ, ವಿವಿಧ ಹೋಮಗಳು ನಡೆದವು. ಸಮುದಾಯ ಭವನದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನೆರವೇರಿಸಲಾಯಿತು. ಇದೇ ಸಂದರ್ಭ ಸಂಸದ ಪ್ರತಾಪ್ ಸಿಂಹ ಅವರನ್ನು ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು.