ಸೋಮವಾರಪೇಟೆ, ಜೂ. 9: ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಇಲ್ಲಿನ ಪತ್ರಿಕಾಭವನದಲ್ಲಿ ಅಧ್ಯಕ್ಷ ಕವನ್ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.ವೀಕ್ಷಕರಾಗಿ ಆಗಮಿಸಿದ್ದ ಜಿಲ್ಲಾ ಸಂಘದ ಉಪಾಧ್ಯಕ್ಷ ರವಿ ಸುಬ್ಬಯ್ಯ ಮಾತನಾಡಿ, ಪತ್ರಕರ್ತರು ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ಪತ್ರಕರ್ತರ ನಡುವೆ ಉತ್ತಮ ಬಾಂಧವ್ಯ ಬೆಸೆಯಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪತ್ರಿಕೋದ್ಯಮದ ಬಗ್ಗೆ ಅಭಿರುಚಿ ಬೆಳೆಸುವ ಕಾರ್ಯ ಮಾಡಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಬಿ.ಎಸ್. ಲೋಕೇಶ್‍ಸಾಗರ್ ಮಾತನಾಡಿ, ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಸೋಮವಾರಪೇಟೆಯಲ್ಲಿ ನಡೆದ ತಾಲೂಕು ಮಟ್ಟದ ಸಮ್ಮೇಳನಕ್ಕೆ ಪತ್ರಕರ್ತರು ಹೆಚ್ಚಿನ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.

ತಾಲೂಕು ಪತ್ರಕರ್ತರ ಸಂಘದಿಂದ ಅಧ್ಯಯನ ಪ್ರವಾಸ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಪತ್ರಿಕಾ ದಿನಾಚರಣೆಯನ್ನು ಹೋಬಳಿ ಕೇಂದ್ರ ಸುಂಟಿಕೊಪ್ಪದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಪತ್ರಕರ್ತರ ಸಂಘದ ಸದಸ್ಯರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಂಘದಿಂದ ಆರ್ಥಿಕ ನೆರವು ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಎ. ಮುರಳೀಧರ್ ಉಪಸ್ಥಿತರಿದ್ದರು. ಸಂಘದ ಖಜಾಂಚಿ ಚಂದ್ರಮೋಹನ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಬಿ.ಎ. ಭಾಸ್ಕರ್ ವಾರ್ಷಿಕ ವರದಿ ವಾಚಿಸಿ, ನಿರೂಪಿಸಿ, ವಿಜಯ್ ಹಾನಗಲ್ ವಂದಿಸಿದರು.