ಗೋಣಿಕೊಪ್ಪಲು, ಜೂ. 10: ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಪಡಿಸಬೇಕು. ರಾಜ್ಯದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ತಡೆಯಬೇಕು. ಎಂದು ಒತ್ತಾಯಿಸಿ ಹಾಗೂ ಮಧ್ಯ ಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್ ಅನ್ನು ಖಂಡಿಸಿ ಕೊಡಗು ಜಿಲ್ಲಾ ರೈತ ಸಂಘ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು.

ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ರೈತರು ಕೊಡಗು ಜಿಲ್ಲಾ ರೈತ ಸಂಘ ಅಧ್ಯಕ್ಷರಾದ ಮನು ಸೋಮಯ್ಯ ನೇತೃತ್ವದಲ್ಲಿ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡು ಮಾನವ ಸರಪಳಿ ನಿರ್ಮಿಸಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಅವರ ಪ್ರತಿಕೃತಿ ದಹನ ಮಾಡಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ಕೊಡಗು ಜಿಲ್ಲಾ ರೈತ ಸಂಘ ಅಧ್ಯಕ್ಷ

(ಮೊದಲ ಪುಟದಿಂದ) ಮನುಸೋಮಯ್ಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಇಂದು ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಲು ಸರ್ಕಾರ ಮುಂದಾಗುತ್ತಿಲ್ಲ. ದೇಶದ ಬೆನ್ನೆಲುಬಾಗಿರುವ ರೈತರನ್ನು ಸರ್ಕಾರ ಕಡೆಗಣಿಸುತ್ತಿರುವದು ಸರಿಯಲ್ಲ ಎಂದ ಅವರು, ಮಧ್ಯ ಪ್ರದೇಶದ ಮನ್ಸೂರ್ ಜಿಲ್ಲೆÀಯಲ್ಲಿ ರೈತರು ಬೆಳೆದ ಈರುಳ್ಳಿ,ಬೇಳೆಕಾಳು ಮತ್ತು ಇತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಹಾಗೂ ರೈತರ ಸಾಲ ಮನ್ನಾ ವಿಚಾರವಾಗಿ ಸಾಂವಿಧಾನಿಕ ಹೋರಾಟ (ಚಳುವಳಿ) ನಡೆಸುತ್ತಿದ್ದಾಗ ರೈತರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಇಂvಹ ಪೊಲೀಸರನ್ನು ಹಾಗೂ ಅಲ್ಲಿನ ಕಲೆಕ್ಟರ್ ಎಸ್.ಕೆ.ಸಿಂಗ್ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್‍ರವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರುಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಕೇಂದ್ರ ಕೃಷಿ ಮಂತ್ರಿಯಾದ ಮೋಹನ್ ಸಿಂಗ್ ಅವರನ್ನು ಮಂತ್ರಿ ಮಂಡಲದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ರೈತ ಸಂಘದ ಸಂಚಾಲಕರಾದ ಚಿಮ್ಮಂಗಡ ಗಣೇಶ್ ಮಾತನಾಡಿ ರೈತರ ಸಂಕಷ್ಟವನ್ನು ಅರಿಯದ ರಾಜಕೀಯ ಪ್ರತಿನಿಧಿಗಳು, ಮಂತ್ರಿಗಳು (ಸಚಿವರು) ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಕಾರ್ಯದರ್ಶಿ ಕಳ್ಳಿಚಂಡ ಧನು, ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್, ಚೆಟ್ರುಮಾಡ ಶಂಕರು, ಮಲಚಿರ ಅಶೋಕ್ ಮಾತನಾಡಿದರು.

ರೈತರ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾಯಿಸಿ ಮನವಿ ಪತ್ರವನ್ನು ತಾಲೂಕು ದಂಡಾಧಿಕಾರಿ ಗೋವಿಂದರಾಜ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಮಾಚಿಮಾಡ ಕಾಶಿ ಚಿಟ್ಟಿಯಪ್ಪ, ಚೋನಿರ ಸತ್ಯಾ, ರಘು ಕರುಂಬಯ್ಯ, ಫ್ಯಾನ್ಸಿ ಕರುಂಬಯ್ಯ, ಸಬಿತಾಭೀಮಯ್ಯ, ಅರಮಣಮಾಡ ವಿನು, ತಿತೀರ ಸೋಮಯ್ಯ, ಕೋಳೆರ ರೆನ್ನಾ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.