ಮಡಿಕೇರಿ, ಜೂ. 14 : ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ನಿರ್ದೇಶನ ನೀಡಿದ್ದಾರೆ.
ಮುಂಗಾರು ಮಳೆ ಸಂದರ್ಭ ದಲ್ಲಿ ಉಂಟಾಗಬಹುದಾದ ಪ್ರವಾಹ ಮುನ್ನೆಚ್ಚರಿಕೆ ಎದುರಿಸುವ ಕುರಿತು ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯ ಬಿದ್ದರೆ ಗಂಜಿ ಕೇಂದ್ರ ತೆರೆಯುವದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಆಯಾಯ ಪ್ರದೇಶದ ವ್ಯಾಪ್ತಿಯಲ್ಲಿ ಅಧಿಕಾರಿಗಳ ತಂಡವನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಆಯಾಯ ಪ್ರದೇಶದ ತಂಡದವರು ಪ್ರವಾಹ, ಮಳೆಹಾನಿ ಸಂಬಂಧಿಸಿ ದಂತೆ ತ್ವರಿತವಾಗಿ ಮಾಹಿತಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ಮರಗಳು ರಸ್ತೆ ಮೇಲೆ ಬಿದ್ದು ಓಡಾಟಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವದು. ಹೋಂ ಗಾರ್ಡ್ಗಳನ್ನು ನಿಯೋಜಿಸುವದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿ ಕೊಳ್ಳುವದು ಮತ್ತಿತರ ಕಾರ್ಯಗಳನ್ನು ಪರಿಣಾಮ ಕಾರಿಯಾಗಿ ನಿರ್ವಹಿಸುವಂತೆ ಹಾಗೂ ಹೆಚ್ಚಿನ ಮಳೆಯಾಗಿ ಪ್ರವಾಹ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರದಲ್ಲಿ ಗುಣಮಟ್ಟದ ಆಹಾರ, ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಅನಾಹುತ ಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದು ಸಭೆಯಲ್ಲಿ ತಿಳಿಹೇಳಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳು, ಅರಣ್ಯ, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಲೋಕೋಪ ಯೋಗಿ, ಸೆಸ್ಕ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತಿತರ ಇಲಾಖೆಗಳ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಬೇಕಿದೆ ಎಂದು ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉಪವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡರ್ ಚಂಗಪ್ಪ, ಅಗ್ನಿಶಾಮಕ ದಳದ ಅಧಿಕಾರಿ ಚಂದನ್ ಅವರುಗಳು ಹಲವು ಮಾಹಿತಿ ನೀಡಿದರು.
ಮಳೆಯಿಂದ ರಸ್ತೆ ಮುಳುಗಡೆ ಯಾಗುವ ಪ್ರದೇಶಗಳಾದ ಕರಡಿಗೋಡು, ಗುಹ್ಯ, ಬಲಮುರಿ, ನೆಲ್ಲಿಹುದಿಕೇರಿ, ಬೇತ್ರಿ, ಬೊಳ್ಳುಮಾಡು, ಹೊದ್ದೂರು, ಎಮ್ಮೆಮಾಡು, ಕಣಿವೆ, ದುಬಾರೆ, ಲಕ್ಷ್ಮಣತೀರ್ಥ ಹೊಳೆ ಮತ್ತು ಭಾಗಮಂಡಲದಂತಹ ಪ್ರದೇಶಗಳಲ್ಲಿ ಅಪಾಯದ ಮಟ್ಟ ಗುರುತಿಸಿ ಕೆಂಪು ಬಾವುಟ ಹಾಕುವದು.
ಜಿಲ್ಲೆಯ ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ಮಳೆ ಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಟ್ಟು ದೈನಂದಿನ ಮಳೆ ವಿವರವನ್ನು ದಾಖಲಿಸಿ ಸರ್ಕಾರಕ್ಕೆ ಸಲ್ಲಿಸಲು ವ್ಯವಸ್ಥೆ ಮಾಡುವದು.
ಅಪಾಯ ಸಂಭವಿಸಬಹುದಾದ ಮುನ್ಸೂಚನೆಯನ್ನು ಪ್ರತೀ ದಿನ ದೂರವಾಣಿ ಮುಖಾಂತರ ಅಥವಾ ಪೊಲೀಸ್ ವಯರ್ಲೆಸ್ ಮುಖಾಂತರ ಅಥವಾ ಇನ್ನಾವುದೇ ಮಾಧ್ಯಮದ ಮುಖಾಂತರ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಇಂಜಿನಿಯರಿಂಗ್ ವಿಭಾಗ, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಚೆಸ್ಕಾಂ, ಬಿಎಸ್ಎನ್ಎಲ್ ಇತ್ಯಾದಿ ಇಲಾಖೆಗಳಿಗೆ ಮಾಹಿತಿ ನೀಡುವಲ್ಲಿ ಕ್ರಮವಹಿಸುವದು ಹಾಗೂ ಜಲಾವೃತ ಪ್ರದೇಶದಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ವ್ಯವಸ್ಥೆ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಭೆ ತೀರ್ಮಾನಿಸಿತು.
ಭಾಗಮಂಡಲ ಹಾಗೂ ದುಬಾರೆಯಲ್ಲಿ ಯಂತ್ರಚಾಲಿತ ದೋಣಿಗಳನ್ನು ನುರಿತ ಚಾಲಕರ ನೇಮಕಾತಿಯೊಂದಿಗೆ ಬಳಸಲು ವ್ಯವಸ್ಥೆ ಮಾಡುವದು. ಜಲಾವೃತ ಪ್ರದೇಶದಿಂದ ತೆರವು ಮಾಡಿದ ಜನರಿಗೆ ತಂಗಲು ಸ್ಥಳೀಯ ಸರ್ಕಾರಿ ಶಾಲೆ ಕಟ್ಟಡಗಳಲ್ಲಿ ವ್ಯವಸ್ಥೆ ಮಾಡುವ ಬಗ್ಗೆ, ಊಟೋಪಚಾರದ ವ್ಯವಸ್ಥೆ ಮಾಡುವ ಬಗ್ಗೆ ಮುನ್ನೆಚ್ಚರಿಕೆ ವಹಿಸುವದು.