ಕೂಡಿಗೆ, ಜೂ. 15: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯರುಗಳು ಅವರವರ ವಾರ್ಡ್‍ನ ಸಮಸ್ಯೆಗಳ ಬಗ್ಗೆ ಸಭೆಗೆ ತಿಳಿಸುವದರ ಮೂಲಕ ಪರಿಹರಿಸುವ ಬಗ್ಗೆ ಚರ್ಚೆ ನಡೆಸಿದರು.

ಮುಂದಿನ ದಿನಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆಗಳನ್ನು ನಡೆಸುವದರ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಮಾತನಾಡಿ, ಗ್ರಾಮದ ಪ್ರಗತಿಗೆ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು ಅವರವರ ಅಭಿಪ್ರಾಯಗಳನ್ನು ಆಲಿಸಿ, ಅದಕ್ಕೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಗ್ರಾಮ ಸಭೆ ನಡೆದ ನಂತರ ಆಯಾ ವಾರ್ಡ್‍ನ ಎಲ್ಲಾ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿ ಕ್ರಮ ಕೈಗೊಳ್ಳಲಾಗುವದು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೆಷಾ ಸಭೆಗೆ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು ಪಂಚಾಯಿತಿಯ ಅಭಿವೃದ್ಧಿಗೆ ಅನುಕೂಲಕರವಾಗುವ ರೀತಿಯಲ್ಲಿ ಸಹಕಾರ ನೀಡಿದ್ದಲ್ಲಿ, ಎಲ್ಲಾ ವಾರ್ಡ್‍ಗಳ ಪ್ರಗತಿಗೆ ಶ್ರಮಿಸಲು ಅನುಕೂಲವಾಗುವದು ಎಂದರು.

ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ಯೋಜನೆಗಳನ್ನು ಕೈಗೆತ್ತಿಕೊಂಡು ಫಲಾನುಭವಿಗಳಿಗೆ ತಲಪಿಸಲು ಎಲ್ಲಾ ಸದಸ್ಯರುಗಳ ಸಹಕಾರ ಮುಖ್ಯ ಎಂದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ. ಸಣ್ಣಪ್ಪ ವಿವಿಧ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.