ಕೂಡಿಗೆ, ಜೂ. 16: ಕೂಡಿಗೆಯಲ್ಲಿ ಅಪೌಷ್ಟಿಕತೆ ಮತ್ತು ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಡಾ. ನಿತೀಶ್ ಮಾತನಾಡಿ, ಉತ್ತಮ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ ನಮ್ಮ ಸುತ್ತಲಿರುವ ಪರಿಸರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರು.

ಡಾ. ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಸದುಪಯೋಗ ಪಡೆದುಕೊಂಡು ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಮಕ್ಕಳಿಗೆ ಅಪೌಷ್ಟಿಕತೆ ಕಾರಣದಿಂದ ಕೆಲವು ರೋಗ-ರುಜಿನಗಳು ಬರುವ ಸಾಧ್ಯತೆ ಇದೆ. ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಸರ್ಕಾರದ ಮೂಲಕ ಲಭ್ಯವಾಗುವ ಪೌಷ್ಟಿಕ ಆಹಾರದ ವ್ಯವಸ್ಥೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ರವಿಚಂದ್ರ ಮಾತನಾಡಿ, ಆರೋಗ್ಯ ಕಾರ್ಯಕರ್ತೆಯರ ನೆರವು ಪಡೆದು ಮಕ್ಕಳ ಪೋಷಕರು ತಪಾಸಣೆಗೆ ಪ್ರತೀ ತಿಂಗಳು ತಮ್ಮ ಮಕ್ಕಳನ್ನು ಆರೋಗ್ಯ ಕೇಂದ್ರಗಳಿಗೆ ಕರೆ ತಂದು ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡಿದರು. ಮಡಿಕೇರಿಯ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆಶಾ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಭೆಯಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಹಿರಿಯ ಆರೋಗ್ಯ ಸಹಾಯಕಿ ದಮಯಂತಿ, ಚಂದ್ರೇಶ್, ಶಾಂತಕುಮಾರಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.