ಸೋಮವಾರಪೇಟೆ, ಜೂ. 20: ಸರ್ಕಾರಿ ಶಾಲೆಗಳಲ್ಲೂ ಸಹ ಆಂಗ್ಲಮಾಧ್ಯಮ ಶಿಕ್ಷಣ ಪದ್ಧತಿ ಅಳವಡಿಸಿದರೆ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯ. ಕನ್ನಡಕ್ಕೆ ಪ್ರಾಧಾನ್ಯತೆ ನೀಡುವ ಮೂಲಕ ಆಂಗ್ಲ ಮಾಧ್ಯಮವನ್ನೂ ಬಳಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅಭಿಪ್ರಾಯಿಸಿದರು.

ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕಿನ ಸರ್ಕಾರಿ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ತಾಯಿ ಹಾಲಾದರೆ, ಆಂಗ್ಲ ಭಾಷೆ ಹಸುವಿನ ಹಾಲಿನಂತಾಗಿದ್ದು, ಎರಡೂ ಜೀವನಕ್ಕೆ ಅವಶ್ಯಕವೇ ಆಗಿವೆ. ಇದರಂತೆ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಅಳವಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು. ಪೂರ್ವ ಪ್ರಾಥಮಿಕ ಶಾಲೆಗಳನ್ನೂ ಸರ್ಕಾರವೇ ತೆರೆಯಬೇಕು. ತಪ್ಪಿದಲ್ಲಿ ಸಂಪೂರ್ಣವಾಗಿ ಶಿಕ್ಷಣವನ್ನು ಖಾಸಗೀಕರಣಗೊಳಿಸಬೇಕು ಎಂದು ವ್ಯಾಖ್ಯಾನಿಸಿದ ಅಭಿಮನ್ಯುಕುಮಾರ್ ಅವರು, ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವಿನಿಯೋಗಿ ಸುತ್ತಿದ್ದರೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲೀಕರಣ ಕುಂಠಿತ ವಾಗುತ್ತಲೇ ಇದೆ ಎಂದು ವಿಷಾದಿಸಿದರು.

ನೂತನವಾಗಿ ಖಾಸಗಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಬಾರದು. ಈ ಬಗ್ಗೆ ತಾ.ಪಂ.ನಿಂದಲೂ ನಿರ್ಣಯ ಕೈಗೊಳ್ಳಲಾಗಿದೆ ಎಂದ ಅವರು, ಕನಿಷ್ಟ ಪಕ್ಷ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಬೇಕು. ಆಂಗ್ಲ ಮಾಧ್ಯಮ ಶಿಕ್ಷಣ ಪದ್ದತಿ ಅಳವಡಿಸಿದರೆ ಮುಂದಿನ 10 ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಸಬಲೀಕರಣ ಗೊಳ್ಳುವದರಲ್ಲಿ ಸಂಶಯವಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ತಾ.ಪಂ. ಸದಸ್ಯೆ ತಂಗಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ. ಪೋಷಕರಲ್ಲೂ ಸಹ ಸರ್ಕಾರಿ ಶಾಲೆಗಳ ಬಗ್ಗೆ ಒಲವು ಕಡಿಮೆಯಾಗುತ್ತಿದೆ. ಕಡ್ಡಾಯ ಶಿಕ್ಷಣ ಕಾಯ್ದೆ ಅನುಷ್ಠಾನಗೊಂಡ ನಂತರ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಪೆಟ್ಟು ಬಿದ್ದಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ, ಸಮಸ್ಯೆಗಳು, ಶಾಲೆಗಳ ಉಳಿವಿಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳೊಂದಿಗೆ ಚುನಾಯಿತ ಜನಪ್ರತಿನಿಧಿಗಳೂ ಸಹ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ರಾಜ್ಯ ಒಕ್ಕೂಟದ ಸಂಚಾಲಕ ನಾಗರಾಜ್ ಮಾತನಾಡಿ, ಒಕ್ಕೂಟದ ವತಿಯಿಂದ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಸರ್ಕಾರಿ ಶಾಲಾ ಶಿಕ್ಷಕರುಗಳಿಗೆ ಹೆಚ್ಚಿನ ತರಬೇತಿ ನೀಡಲಾಗುತ್ತಿದ್ದು, ಸಮಿತಿ ಸದಸ್ಯರುಗಳಿಗೆ ತಮ್ಮ ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶೋಭಾ ಭಾಸ್ಕರ್, ಜಿಲ್ಲಾಧ್ಯಕ್ಷ ನಾಗೇಶ್, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಅಣ್ಣಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಅವರುಗಳು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.