ಮಡಿಕೇರಿ, ಜೂ.19: ‘ಬಾಲ್ಯ ವಿವಾಹ ತಡೆ ಹಾಗೂ ಶಾಲೆ ಕಡೆ ನನ್ನ ನಡೆ’ ಕುರಿತ ಜಾಗೃತಿ ಆಂದೋಲನಕ್ಕೆ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಚಾಲನೆ ನೀಡಿದರು.

ಕಾನೂನು ಸೇವಾ ಪ್ರಾಧಿಕಾರ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಬಾಲ್ಯ ವಿವಾಹ ತಡೆಯುವದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು. ಸರ್ಕಾರ ಹೆಣ್ಣು ಮಕ್ಕಳಿಗೆ ಪದವಿವರೆಗೆ ಉಚಿತ ಶಿಕ್ಷಣ ನೀಡುತ್ತಿದ್ದು, ಇದರ ಉಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಅವರು ಹೇಳಿದರು.

‘ಕುಟುಂಬದಲ್ಲಿ ಹಲವು ಸಮಸ್ಯೆಗಳ ನೆಪ ಹೇಳಿ ಮಕ್ಕಳನ್ನು ಶಾಲೆಯಿಂದ ಹೊರಗುಳಿಸಬಾರದು, ಮಕ್ಕಳನ್ನು ಶಾಲೆಗೆ ಕಳುಹಿಸಿದಾಗ ಇಡೀ ಕುಟುಂಬ ನಗುವಿನಿಂದ ಕಾಣಬಹುದು, ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯಗಳಿದ್ದು, ವಿದ್ಯಾಭ್ಯಾಸದ ಕಡೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸಲಹೆ ಮಾಡಿದರು.’

ಹಿರಿಯ ಸಿವಿಲ್ ನ್ಯಾಯಾಧೀಶ ಸೆಲ್ವಕುಮಾರ್ ಅವರು ಮಾತನಾಡಿ ಬಾಲ್ಯ ವಿವಾಹದಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ. ಆಟವಾಡುವ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಮದುವೆಯಾದರೆ ಸಮಾಜದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಯೋಚಿಸಬೇಕಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಮಮ್ತಾಜ್ ಮಾತನಾಡಿ ಜಿಲ್ಲೆಯಲ್ಲಿ 2014 ರಿಂದ ಇದುವರೆಗೆ ಸುಮಾರು 27 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಜೆಎಂಎಫ್‍ಸಿ ನ್ಯಾಯಾಧೀಶ ಶಿವಾನಂದ ಹಂಚಿ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ, ಇನ್ಸ್‍ಪೆಕ್ಟರ್ ಮೇದಪ್ಪ ಇತರರು ಇದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕ ಚಿದಾನಂದ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ ವಂದಿಸಿದರು.