ಕುಶಾಲನಗರ, ಜೂ. 23: ಶಿಕ್ಷಣ ವಂಚಿತ ಮಕ್ಕಳನ್ನು ಮರಳಿ ಶಾಲೆಗೆ ದಾಖಲಿಸುವ ಕುರಿತಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜೆಎಂಎಫ್‍ಸಿ ನ್ಯಾಯಾಧೀಶ ನಟರಾಜ್ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಮತ್ತು ಕಾರ್ಮಿಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಬಾಲ್ಯ ವಿವಾಹ ತಡೆ’ ಮತ್ತು ‘ಶಾಲೆ ಕಡೆ ನನ್ನ ನಡೆ’ ಕುರಿತ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಸ್ಥಳೀಯ ಜಿಎಂಪಿ ಶಾಲಾ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕಾಫಿ ತೋಟಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಿ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ಒದಗಿಸಲು ಈ ಮೂಲಕ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾನೂನಿನ ಅರಿವಿನ ಕೊರತೆಯಿಂದಾಗಿ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಲು ಅಡ್ಡಿಯುಂಟಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ಜ್ಞಾನ ವೃದ್ದಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಮಮ್ತಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ಮತ್ತಿತರರು ಇದ್ದರು.