ಗೋಣಿಕೊಪ್ಪಲು, ಜೂ. 29: ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಅರ್ವತ್ತೊಕ್ಲು ಪ್ರತಿಭಾ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಬಾಳೆಲೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಳೆಲೆ ಗ್ರಾ.ಪಂ. ಅಧ್ಯಕ್ಷೆ ಕಾಂಡೇರ ಕುಸುಮ, ಕ್ರೀಡಾಕೂಟಗಳು ಗ್ರಾಮದಲ್ಲಿ ಭಾಂದವ್ಯವೃದ್ದಿಗೆ ಸಹಕಾರಿಯಾಗಿದ್ದು, ಯುವಕ ಸಂಘಗಳ ಈ ರೀತಿಯ ಕಾರ್ಯಕ್ರಮಗಳು ಸಮಾಜವನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಯುವಕ ಸಂಘಗಳು ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಸಮಾಜಮುಖಿಯಾಗಿ ದುಡಿಯಬೇಕು ಎಂದು ಸಲಹೆ ನೀಡಿದರು.

ಬಾಳೆಲೆ ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗ ಈ ರೀತಿಯ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮರೆಯಾಗುತ್ತಿರುವ ಗ್ರಾಮೀಣ ಆಟಗಳನ್ನು ಕಲಿತು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕೆಲಸವಾಗಬೇಕು. ಇಂದಿನ ಯುವ ಪೀಳಿಗೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೇ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ದೈಹಿಕವಾಗಿ ಸದೃಢರಾಗಬೇಕೆಂದು ಕರೆ ನೀಡಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಬಾಳೆಲೆಯ ಆದರ್ಶ್ ಬಾಯ್ಸ್ ಪ್ರಥಮ, ಕುಂಬಾರಕಟ್ಟೆ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ಸುಮಾರು 25 ತಂಡಗಳು ಸೆಣೆಸಾಡಿದವು.

ಸಭಾ ಕಾರ್ಯಕ್ರಮದಲ್ಲಿ ನಿಟ್ಟೂರು ಗ್ರಾ.ಪಂ ಉಪಾಧ್ಯಕ್ಷ ಪೋರಂಗಡ ಪವನ್ ಚಿಟ್ಟಿಯಪ್ಪ, ಎ.ಪಿ.ಸಿ.ಎಂ.ಎಸ್. ಸದಸ್ಯ ಮಾಚಂಗಡ ಸುಜಾ ಪೂಣಚ್ಚ, ಹಾಕಿಪಟು ಮಾಚಂಗಡ ದರ್ಶನ್ ಸೋಮಣ್ಣ, ಕಾಫಿ ಬೆಳೆಗಾರ ಚೆಟ್ಟಿಮಾಡ ಶಿವು ಮತ್ತಿತರರು ಉಪಸ್ಥಿತರಿದ್ದರು.