ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ್ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಸ್‍ಪಿ ಸಂಪತ್ ಕುಮಾರ್ ಮಾತನಾಡುತ್ತ, ವಿದ್ಯಾರ್ಥಿ ಹಂತದಲ್ಲಿಯೇ ಮಾದಕ ದ್ರವ್ಯ ಚಟಕ್ಕೆ ಬಂದರೆ ಜ್ಞಾಪಕ ಶಕ್ತಿಯು ಕಡಿಮೆಯಾಗುತ್ತದೆ, ಇದರ ಜೊತೆಯಲ್ಲಿ ನರಗಳ ದೌರ್ಬಲ್ಯ ಉಂಟಾಗಿ, ಕಲಿಕೆಯಲ್ಲಿ ಆಸಕ್ತಿ ದೂರವಾಗುತ್ತದೆ. ಮಾದಕ ದ್ರವ್ಯದ ಚಟ ಮನುಷ್ಯನನ್ನು ಗುಲಾಮನನ್ನಾಗಿಸುತ್ತದೆ. ವಿದ್ಯಾರ್ಥಿಗಳು ಶಕ್ತಿಯಾಗಿ ದೇಶಕ್ಕೆ ಕೊಡುಗೆ ನೀಡಲು ಇಂತಹ ಮಾದಕ ದ್ರವ್ಯಗಳನ್ನು ವಿರೋಧಿಸುವ ಮೂಲಕ ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟು ಅಮೂಲ್ಯ ಜೀವನ ಕಂಡುಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ. ಮಹೇಶ್ ಮಾತನಾಡುತ್ತಾ, ಮಾದಕ ದ್ರವ್ಯ ಸೇವನೆಯು ಗೆದ್ದಲು ಹುಳ ಇದ್ದಂತೆ. ಇದನ್ನು ತೊಡೆದು ಹಾಕಲು ಯುವಶಕ್ತಿಯ ಸಹಕಾರ ಪ್ರಮುಖವಾಗಿರುತ್ತದೆ. ಮಾದಕ ದ್ರವ್ಯ ಸೇವನೆಯಿಂದ ಯುವಕರು ಸಮಾಜ ಬಾಹಿರ ದುಷ್ಕøತ್ಯಗಳಲ್ಲಿ ತೊಡಗಿ, ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ ಎಂದರು.

ಇನ್ನೋರ್ವ ಮುಖ್ಯ ಅತಿಥಿ ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೆಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಯಲ್ಲಿ ಕಾನೂನಿನ ಬಗ್ಗೆ ತಿಳಿದುಕೊಂಡು ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ನಿಭಾಯಿಸಲು ಸುಲಭವಾಗುವದು. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ವಿದ್ಯಾರ್ಥಿಗಳ ಓದಿನ ಮೇಲೆ ಪರಿಣಾಮ ಬೀರುತ್ತಿವೆ. ಇಂತಹವರ ಮೇಲೆ ಕಾನೂನಿನನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲ ಮಹಾಲಿಂಗಯ್ಯ, ಸ್ಥಳೀಯ ವೈದ್ಯಾಧಿಕಾರಿ ರಾಮಶೆಟ್ಟಿ ಮಾದಕ ದ್ರವ್ಯ ವಿರೋಧದ ಬಗ್ಗೆ ಉಪನ್ಯಾಸ ನೀಡಿದರು.

ರಾಷ್ಟ್ರೀಯ ಭಾವೈಕ್ಯತೆ ಮತ್ತು ಕೋಮು ಸೌಹಾರ್ದ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭ ಕಾಲೇಜಿನ ಉಪನ್ಯಾಸಕರುಗಳು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.