ಸೋಮವಾರಪೇಟೆ, ಜು.3: ರೈತರು ಸಹಕಾರಿ ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲವನ್ನು 50 ಸಾವಿರದವರೆಗೆ ರಾಜ್ಯ ಸರ್ಕಾರ ಮನ್ನಾ ಮಾಡಿದ್ದು, ಅದರಂತೆ ವಾಣಿಜ್ಯ ಬ್ಯಾಂಕ್‍ಗಳ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕೆಂದು ಆಗ್ರಹಿಸಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಇಲ್ಲಿನ ತಾಲೂಕು ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ತಕ್ಷಣ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರೈತರ 50 ಸಾವಿರದವರೆಗಿನ ಸಾಲವನ್ನು ಮನ್ನಾ ಮಾಡಿದ್ದು, ಇದರಲ್ಲಿ ಕೊಡಗಿನ 33 ಸಾವಿರ ಮಂದಿ ಪ್ರಯೋಜನ ಪಡೆಯಲಿದ್ದಾರೆ. ಜಿಲ್ಲೆಯ 12 ಸಾವಿರ ರೈತರ ಸಂಪೂರ್ಣ ಸಾಲ ಮನ್ನಾ ಆಗಲಿದೆ ಎಂದರು.

ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭವೂ 72 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲಾಗಿತ್ತು. ಕೊಡಗಿಗೆ 32 ಕೋಟಿ ರೂಪಾಯಿ ಮನ್ನಾ ಆಗಿತ್ತು. ರಾಜ್ಯದಲ್ಲಿ ಇದೀಗ ವಾಣಿಜ್ಯ ಬ್ಯಾಂಕ್‍ಗಳಲ್ಲಿ 43 ಸಾವಿರ ಕೋಟಿ ಸಾಲವಿದ್ದು, ಇದನ್ನು ಕೇಂದ್ರದ ಬಿಜೆಪಿ ಸರ್ಕಾರ ಮನ್ನಾ ಮಾಡಲಿ ಎಂದು ಆಗ್ರಹಿಸಿದರು.

50 ಸಾವಿರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ತಗಾದೆ ತೆಗೆದಿರುವದು ಹಾಸ್ಯಾಸ್ಪದ. ಬಿಜೆಪಿಯವರಿಗೆ ರೈತಪರ ಕಾಳಜಿಯಿದ್ದರೆ ವಾಣಿಜ್ಯ ಬ್ಯಾಂಕ್‍ಗಳಲ್ಲಿರುವ ಸಾಲವನ್ನು ಮೊದಲು ಮನ್ನಾ ಮಾಡಿಸಲಿ ಎಂದು ತಿರುಗೇಟು ನೀಡಿದರು.

ಈ ಸಂಬಂಧಿತ ಮನವಿ ಪತ್ರವನ್ನು ತಾಲೂಕು ಕಚೇರಿಯ ಶಿರಸ್ತೇದಾರ್ ಪೊನ್ನು ಅವರ ಮುಖಾಂತರ ಪ್ರಧಾನಿ ಕಾರ್ಯಾಲಯಕ್ಕೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ನಟೇಶ್‍ಗೌಡ, ಜಿಲ್ಲಾ ಕಾರ್ಯದರ್ಶಿ ಚಂಗಪ್ಪ, ಉಪಾಧ್ಯಕ್ಷ ನಂದಕುಮಾರ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್, ಮಡಿಕೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಂಜುಳಾ ಹರೀಶ್, ಪಕ್ಷದ ಮುಖಂಡರಾದ ಬಸಪ್ಪ, ಜನಾರ್ಧನ್, ಲಾರೆನ್ಸ್, ಹೂವಯ್ಯ, ಹೆಚ್.ಸಿ. ನಾಗೇಶ್, ಕರಿಯಪ್ಪ, ಬ್ಯಾಡಗೊಟ್ಟ ಅಬ್ಬಾಸ್, ತಾ.ಪಂ. ಸದಸ್ಯರುಗಳಾದ ಅನಂತ್‍ಕುಮಾರ್, ಬಿ.ಬಿ. ಸತೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.