ಸೋಮವಾರಪೇಟೆ, ಜು. 5: ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ವಿ.ಕೆ. ಸತೀಶ್‍ಕುಮಾರ್ ಹೇಳಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಅಧ್ಯಕ್ಷ ಟಿ.ಈ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕು. ಬ್ಲಾಕ್ ಸಮಿತಿ ರಚನೆಯಾಗಬೇಕು. ಪ್ರತಿಯೊಬ್ಬರೂ ಪಕ್ಷಕ್ಕಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಸÀತೀಶ್ ಕುಮಾರ್ ಹೇಳಿದರು.

ಪಕ್ಷ ಸಂಘಟನೆ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್, ಜಿಲ್ಲಾ ಎಸ್.ಸಿ. ಘಟಕದ ಉಪಾಧ್ಯಕ್ಷರಾದ ರಾಜಮ್ಮ ರುದ್ರಯ್ಯ, ಬೇಲಯ್ಯ, ಪುಟ್ಟಸ್ವಾಮಿ, ಪಕ್ಷದ ಪ್ರಮುಖರಾದ ಹೂವಯ್ಯ, ಜಗದೀಶ್, ಜನಾರ್ಧನ್ ಮತ್ತಿತರರು ಉಪಸ್ಥಿತರಿದ್ದರು.