ವೀರಾಜಪೇಟೆ, ಜು. 6: ಸರ್ಕಾರಿ ಶಾಲೆಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಂತೆ ಹಾಗೂ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸುವಂತೆ ಶಾಲಾ ಆಡಳಿತ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ ಹೇಳಿದರು.
ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರೂ.3,97,200 ವೆಚ್ಚದಲ್ಲಿ ನೂತನ ಅಕ್ಷರ ದಾಸೋಹ ಅಡುಗೆ ಕೋಣೆಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಪೋಷಕರು ಭಾಗವಹಿಸಿ ಮಕ್ಕಳ ಪ್ರತಿಭೆಗಳ ಬಗ್ಗೆ ಗಮನ ಹರಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ, ಇಲ್ಲಿನ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಗುರಿ ಮುಟ್ಟುವಂತಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಮಾತನಾಡಿ, ಮಕ್ಕಳ ಚಟುವಟಿಕೆಗಳ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸಬೇಕು ಎಂದರು. ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ. ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೋಂದಮ್ಮ, ಅಕ್ಷರ ದಾಸೋಹ ಅಧಿಕಾರಿ ಮಹಾದೇವ ಸ್ವಾಮಿ ಮಾತನಾಡಿದರು.
ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಂ. ಚಂದ್ರಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಲಾವಣ್ಯ, ಶೀಲಾಮಣಿ, ಸರಸ್ವತಿ, ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಕೆ. ವಿಶ್ವನಾಥ್, ಶಿಕ್ಷಕ ವೃಂದ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಬಿ.ಎಂ. ಸುನಿತಾ ಸ್ವಾಗತಿಸಿ, ಹೇಮರಾವ್ ನಿರೂಪಿಸಿ, ಬಿ. ಮಂಜುನಾಥ್ ವಂದಿಸಿದರು.