ಮಡಿಕೇರಿ, ಜು. 6: ಜಿಲ್ಲೆಯಲ್ಲಿರುವ ಸರ್ಕಾರಿ ಭೂಮಿಯನ್ನು ಸಂರಕ್ಷಣೆ ಮಾಡುವತ್ತ ವಿಶೇಷ ಗಮನ ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎನ್.ವಿ.ಪ್ರಸಾದ್ ಅವರು ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಮೀನುಗಳ ನ್ಯಾಯಾಲಯ ಪ್ರಕರಣಗಳು ಮತ್ತು ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರಿ ಭೂಮಿಯನ್ನು ಸಂರಕ್ಷಣೆ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಂಗನವಾಡಿ, ಶಾಲೆ, ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಕಚೇರಿ ಹೀಗೆ ಸರ್ಕಾರಿ ಕಾರ್ಯಗಳಿಗೆ ಭೂಮಿ ಸಿಗುವದಿಲ್ಲ. ಭೂಮಿ ಕೊಡಲು ಸಹ ಯಾರೂ ಮುಂದೆ ಬರುವದಿಲ್ಲ. ಆದ್ದರಿಂದ ಸರ್ಕಾರಿ ಭೂಮಿ ಸಂರಕ್ಷಣೆ ಮಾಡಿಕೊಳ್ಳುವದು ಸರ್ಕಾರದ ಎಲ್ಲಾ ಹಂತದ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಡಾ. ಎನ್.ವಿ. ಪ್ರಸಾದ್ ಹೇಳಿದರು.
ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಪರಿಶೀಲಿಸಿ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಬೇಕು. ಸರ್ಕಾರಿ ಭೂಮಿಗೆ ಬೇಲಿ ಹಾಕುವ ಕೆಲಸ ಮಾಡಬೇಕು. ಇದಕ್ಕಾಗಿ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದು ಸಾರ್ವಜನಿಕ ಜಮೀನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.
ಕೆರೆ ಪುನಶ್ಚೇತನಕ್ಕೆ ಸರ್ಕಾರ ಒತ್ತು ನೀಡಿದ್ದು, ಒತ್ತುವರಿಯಾಗಿರುವ ಕೆರೆಗಳ ಭೂಮಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ ಸರ್ಕಾರಿ ಭೂಮಿಗೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿರುವ ಪ್ರಕರಣ ಇತ್ಯರ್ಥಪಡಿಸುವ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಸರ್ವೆ ಕಾರ್ಯ ಮಾಡುವದು. ಸರ್ಕಾರಿ ಜಮೀನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮುಂದಾಗುವದು. ಮತ್ತಿತರ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸಾರ್ವಜನಿಕ ಜಮೀನುಗಳ ನಿಗಮದ ವಿಶೇಷ ಅಧಿಕಾರಿ ಆರ್.ನಾಗರಾಜ ಶೆಟ್ಟಿ ಅವರು ಮಾತನಾಡಿ ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಕರಣಗಳು ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ದಾಖಲಾಗಿವೆ ಎಂದು ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಸರ್ಕಾರಿ ಭೂಮಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ತಹಶೀಲ್ದಾರ್ ಕುಸುಮ, ಮಹೇಶ್, ಗೋವಿಂದರಾಜು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಮಹಮ್ಮದ್ ಮುನೀರ್, ಭೂಮಾಪನ ಇಲಾಖೆಯ ಉಪ ನಿರ್ದೇಶಕ ವಿದ್ಯಾಯಿನಿ ಮೊದಲಾದವರು ಭಾಗವಹಿಸಿದ್ದರು.