ಕುಶಾಲನಗರ, ಜು. 7: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ 1 ವರ್ಷ ಸಂದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ಅಂತಿಮ ವಿಚಾರಣೆ ತಾ. 10 ರಂದು ನಡೆಯಲಿದೆ ಎಂದು ಗಣಪತಿ ಸಹೋದರ ಮಾಚಯ್ಯ ತಿಳಿಸಿದ್ದಾರೆ.ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವದು, ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿವೈಎಸ್ಪಿ ಗಣಪತಿ ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್‍ನೋಟ್ ಮತ್ತು ಖಾಸಗಿ ವಾಹಿನಿಗೆ ನೀಡಿದ ಹೇಳಿಕೆಯಂತೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಡಿವೈಎಸ್ಪಿ ಗಣಪತಿ ಮೃತರಾಗಿ 1 ವರ್ಷ ಸಂದ ಸಂದರ್ಭ ಗಣಪತಿ ತಂದೆ ಎಂ.ಕೆ. ಕುಶಾಲಪ್ಪ, ಸಹೋದರ ಮಾಚಯ್ಯ ಮತ್ತು ಕುಟುಂಬ ಸದಸ್ಯರು ರಂಗಸಮುದ್ರದ ಮನೆಯಲ್ಲಿ ಪೂಜೆ ಸಲ್ಲಿಸಿ ನಂತರ ಗ್ರಾಮದ ನಂಜುಂಡೇಶ್ವರ ದೇವಾಲಯ, ಮಡಿಕೇರಿಯ ಕೋಟೆ ಗಣಪತಿ ದೇವಾಲಯದಲ್ಲಿ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಿದ್ದಾರೆ.