ಸೋಮವಾರಪೇಟೆ, ಜು. 12: ಕೇಂದ್ರ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇದನ್ನು ಖಂಡಿಸಿ ಹೋಬಳಿ ಕಾಂಗ್ರೆಸ್ ವತಿಯಿಂದ ತಾ. 15ರಂದು ಶನಿವಾರಸಂತೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತ ಸಮುದಾಯದವರ ಸಮ್ಮುಖದಲ್ಲಿ ಪ್ರತಿಭಟನೆ ನಡೆಯಲಿದೆ. ಅಂದು ಬೆಳಿಗ್ಗೆ 11ಗಂಟೆಗೆ ಕೆಆರ್‍ಸಿ ಸರ್ಕಲ್‍ನಿಂದ ನಾಡಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

ಸತತ ಬರಗಾಲದಿಂದ ಜಿಲ್ಲೆ ಹಾಗೂ ರಾಜ್ಯದ ರೈತರು ಸಾಲಗಾರರಾಗಿ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ನೂರಾರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ ಕೃಷಿಕರ 50ಸಾವಿರ ರೂ. ಸಾಲವನ್ನು ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಡೆದಿರುವ 45 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಕೇಂದ್ರದ ಯುಪಿಎ ಸರ್ಕಾರ 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡುವ ಮೂಲಕ ಕಾಂಗ್ರೆಸ್ ರೈತಪರ ಎಂದು ಸಾಬೀತುಪಡಿಸಿದೆ. ಆದರೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗದಷ್ಟು ದಿವಾಳಿಯಾಗಿದೆ ಎಂದು ಟೀಕಿಸಿದರು.

ಕೇಂದ್ರದ ರೈತ ವಿರೋಧಿ ನೀತಿಯನ್ನು ರೈತರು ಒಕ್ಕೊರಲಿನಿಂದ ಪ್ರತಿಭಟಿಸುವ ಅನಿವಾರ್ಯವಿದೆ. ಈ ಹಿನ್ನೆಲೆ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಕಾಂಗ್ರೆಸ್ ಆಗ್ರಹಿಸುತ್ತಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಅಬ್ಬಾಸ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರತ್ ಶೇಖರ್, ತಾಪಂ ಸದಸ್ಯ ಅನಂತ್ ಕುಮಾರ್, ಮುಖಂಡ ಮಹಮ್ಮದ್ ಪಾಷ ಇದ್ದರು.