ಕುಶಾಲನಗರ, ಜು. 12: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಚರ್ಚೆ ನಡೆಯಿತು. ದಿನದಿಂದ ದಿನಕ್ಕೆ ಕಸ ವಿಲೇವಾರಿ ಸಮಸ್ಯೆ ಉಲ್ಬಣಿಸುತ್ತಿದ್ದರೂ ಅಧ್ಯಕ್ಷರು ಯಾವದೇ ರೀತಿಯ ಶಾಶ್ವತ ಪರಿಹಾರಕ್ಕೆ ಮುಂದಾಗದಿರುವ ಬಗ್ಗೆ ಸಭೆಯಲ್ಲಿ ಸದಸ್ಯರಿಂದ ತೀವ್ರ ಆಕ್ರೋಶ ಕೇಳಿಬಂತು. ಸಮಸ್ಯೆ ಬಗೆಹರಿಸಲು ವಿಫಲರಾಗಿರುವ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಲವು ಸದಸ್ಯರು ಸಭೆಯಲ್ಲಿ ಒತ್ತಾಯಿಸಿದರು.

ಸಮರ್ಪಕವಾಗಿ ಕಸ ವಿಲೇವಾರಿಯಾಗದೆ ರೋಗರುಜಿನಗಳು ಹರಡುತ್ತಿದ್ದು ಗ್ರಾಮಸ್ಥರು ಡೆಂಗ್ಯೂ ರೋಗ ಹರಡುವ ಭೀತಿಯಲ್ಲಿಯೇ ಬದುಕು ಸಾಗಿಸುವಂತಾಗಿದೆ. ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸದಂತಹ ಪರಿಸ್ಥಿತಿ ಸದಸ್ಯರಿಗೆ ಎದುರಾಗಿದೆ. ಅಧ್ಯಕ್ಷರು ಈ ಬಗ್ಗೆ ಗಮನಹರಿಸದೆ ಸದಸ್ಯರ ಬಗ್ಗೆ ಅಸಡ್ಡೆ ವರ್ತನೆ ತೋರುತ್ತಿದ್ದಾರೆ ಎಂದು ಸದಸ್ಯರಾದ ಸಂತೋಷ್, ಅರುಣ್‍ಚಂದ್ರ, ಅಬ್ದುಲ್ ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಗ್ರಾಮದ ಸರ್ವೇ ನಂ 5/1 ರಲ್ಲಿ ಕಸ ವಿಲೇವಾರಿಗೆ ಜಾಗ ಗುರುತಿಸಿದ್ದರೂ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಕೂಡಲೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವಂತೆ ಸದಸ್ಯರು ಆಗ್ರಹಿಸಿದರು. ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿದ ಪಂಚಾಯಿತಿ ಆಡಳಿತ ಮಂಡಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ಮಡಿಕೇರಿಗೆ ತೆರಳಿದರು.

ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷ ತಾರಾನಾಥ್, ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸೇರಿದಂತೆ ಸದಸ್ಯರು ಇದ್ದರು.