ಸೋಮವಾರಪೇಟೆ, ಜು. 13: ಯುವ ಜನಾಂಗದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಭಿಪ್ರಾಯಿಸಿದರು.

ಸಮೀಪದ ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವಂತಹ ಸಾಮಥ್ರ್ಯ ಇರುವದು ಇಂದಿನ ಯುವ ಜನಾಂಗದಲ್ಲಿ ಮಾತ್ರ. ಈ ನಿಟ್ಟಿನಲ್ಲಿ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ವಿದ್ಯಾಭ್ಯಾಸದೊಂದಿಗೆ ಆತ್ಮ ವಿಶ್ವಾಸ, ಏಕಾಗ್ರತೆ, ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ನಿವೃತ್ತ ಕರ್ನಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಯಾವದೇ ದುಶ್ಚಟ, ಸಮಾಜಘಾತುಕ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ಪ್ರಾಂಶುಪಾಲ ಸಿ.ಜೆ.ಮಂದಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಸೀತಾ ಚಿಟ್ಟಿಯಪ್ಪ, ಎಂ.ಸಿ ಬೋಜಮ್ಮ, ಮುಖ್ಯ ಶಿಕ್ಷಕಿ ರೇವತಿ, ಉಪನ್ಯಾಸಕ ಎನ್.ಎನ್. ಮನೋಹರ್, ಕಾಂಗ್ರೆಸ್ ಪ್ರಮುಖರಾದ ಕೆ.ಕೆ. ಮಂಜುನಾಥ್ ಕುಮಾರ್ ಉಪಸ್ಥಿತರಿದ್ದರು.