ಆಲೂರು-ಸಿದ್ದಾಪುರ, ಜು. 13: ‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಯ ತಾತ್ಕಾಲಿಕ ಸರಳ ವಿಧಾನದಿಂದ ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ಹಾಕಬಹುದು’ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಶಿವಪ್ರಕಾಶ್ ಅಭಿಪ್ರಾಯ ಪಟ್ಟರು.

ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವದಲ್ಲಿ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಚೀನಾದಲ್ಲಿ ಭಾರೀ ಜನಸಂಖ್ಯೆ ಸ್ಫೋಟವನ್ನು ನಿಯಂತ್ರಿಸಲು ಒಂದು ಕುಟುಂಬಕ್ಕೆ ಒಂದೇ ಮಗು ಎಂಬ ನಿಯಮವನ್ನು ಜಾರಿಗೊಳಿಸಿ ಸ್ವಲ್ಪಮಟ್ಟಿಗೆ ಆ ದೇಶ ಜನಸಂಖ್ಯೆಯನ್ನು ನಿಯಂತ್ರಣ ಮಾಡಿದೆ. ಅದೇ ರೀತಿಯಲ್ಲಿ ನಮ್ಮ ದೇಶದಲ್ಲೂ ಜನಸಂಖ್ಯೆಯನ್ನು ನಿಯಂತ್ರಣಗೊಳಿಸಲು ನಿಯಮಗಳನ್ನು ಜಾರಿಗೊಳಿಸಿದೆ. ಈ ದಿಸೆಯಲ್ಲಿ ಪ್ರತಿಯೊಂದು ಕುಟುಂಬ ಜನಸಂಖ್ಯೆ ಸ್ಫೋಟದ ಬಗ್ಗೆ ಜಾಗೃತಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪರಮೇಶ್ವರಪ್ಪ, ಸಹ ಶಿಕ್ಷಕರುಗಳಾದ ಯಶೋರಾಣಿ, ಶ್ರುತಿ, ರಮೇಶ್, ಮಂಜಪ್ಪ, ಧರ್ಮಪ್ಪ ಮುಂತಾದವರು ಇದ್ದರು.