ಸೋಮವಾರಪೇಟೆ, ಜು. 14: ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆ ತಾ. 18 ರಂದು ಪೂರ್ವಾಹ್ನ 11 ಗಂಟೆಗೆ ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಎಐಸಿಸಿ ಕೊಡಗು ಉಸ್ತುವಾರಿ ವೇಣುನಾಥನ್ ಅವರು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಕೆಪಿಸಿಸಿ ಸದಸ್ಯರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
2016-17ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ರೂ. 50 ಕೋಟಿ ಅನುದಾನದ ಕಾಮಗಾರಿಗಳ ಗುರುತಿಸುವ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಲಾಗುವದು. ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ ಸೇರಿದಂತೆ ವಿವಿಧ ಯೋಜನೆಗಳು ಹಾಗು ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ನಡೆದ ಜನಪರ ಯೋಜನೆಗಳ ಮಾಹಿತಿಯನ್ನು ಮತದಾರ ಮನೆಗೆ ತಲಪಿಸುವ ಕಾರ್ಯದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗುವದು ಎಂದರು. ಬೂತ್‍ಮಟ್ಟದಲ್ಲಿ ಕಾರ್ಯಕರ್ತರ ನಿಯೋಜನೆ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ ಎಂದು ಮಾಹಿತಿಯಿತ್ತರು.
ಗೋಷ್ಠಿಯಲ್ಲಿ ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ, ಮಡಿಕೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್, ಪ್ರಮುಖರಾದ ಲಾರೆನ್ಸ್, ಹೂವಯ್ಯ ಮತ್ತಿತರರು ಉಪಸ್ಥಿತರಿದ್ದರು.