ವೀರಾಜಪೇಟೆ, ಜು. 14: ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಅನುದಾನವನ್ನು ಒದಗಿಸುತ್ತಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಹೊಸ ದಾಖಲೆಯನ್ನು ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿ.ಜೆ.ಪಿ. ಕೇಂದ್ರ ಸಮಿತಿಯ ಅಭಿವೃದ್ಧಿ ಯೋಜನೆಯ ವೀರಾಜಪೇಟೆ ವ್ಯಾಪ್ತಿಯ ಕಾರ್ಯ ವಿಸ್ತಾರಕ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.

ವೀರಾಜಪೇಟೆ ಪಟ್ಟಣ ವ್ಯಾಪ್ತಿಯ ಜನತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅರಿವು ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ಜನರ ಬಳಿ ಹೋಗಿ ಮಾತನಾಡುತ್ತ ಭವ್ಯ ಭಾರತ ಭವಿಷ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರ ಬೆಳೆಗಳಿಗೆ ವಿಮಾ ಸೌಲಭ್ಯ, ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ಶಾಲೆಗಳಿಗೂ ಹೆಚ್ಚು ಶೌಚಾಲಯಗಳ ನಿರ್ಮಾಣ, ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ, ಗ್ರಾಮೀಣ ಯುವಕರ ಉದ್ಯೋಗಾರ್ಹತೆ ಹೆಚ್ಚಿಸಲು ದೀನದಯಾಳ್ ಕೌಶಲ್ಯ ಯೋಜನೆ, ಸ್ವ-ಉದ್ಯೋಗ, ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆಗಳ ನಿರ್ಮಾಣ, ನೋಟು ಅಮಾನ್ಯ; ಕಪ್ಪು ಹಣ ಮತ್ತು ಭಯೋತ್ಪಾದನೆ ನಿಗ್ರಹ, ಭ್ರಷ್ಟಾಚಾರ ಅಂತ್ಯಗೊಳಿಸಲು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಹೊಸ ನಿದರ್ಶನ ನಿರ್ಮಾಣ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ಪ್ರೋತ್ಸಾಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿರುವದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.

ಕೇಂದ್ರ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವಂತಹ ಕಾರ್ಯಕ್ರಮದಲ್ಲಿ ಬಿ.ಜೆಪಿ. ಪಕ್ಷದ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಹಾಗೂ ವೀರಾಜಪೇಟೆ ತಾಲೂಕು ಉಸ್ತುವಾರಿ ಉಮನಾಥ್ ಎ. ಕೋಟಿಯನ್, ವೀರಾಜಪೇಟೆ ತಾಲೂಕು ಬಿ.ಜೆ.ಪಿ. ಸಮಿತಿ ಅಧ್ಯಕ್ಷ ಅರುಣ್ ಭೀಮಯ್ಯ ಮಾತನಾಡಿದರು. ಪ್ರಚಾರ ಕಾರ್ಯಕ್ರಮದಲ್ಲಿ ಬಿ.ಜೆ.ಪಿ.ಯ ಎ. ಅನಿಲ್ ಮಂದಣ್ಣ, ಬಿ.ಹೆಚ್. ಕಿರಣ್, ಅಪ್ಪುಣು ಪೂವಯ್ಯ, ಮಂಜುಳ ಅಯ್ಯಪ್ಪ, ಆಶಾ ಸುಬ್ಬಯ್ಯ, ಅರುಣ್, ಹಾಗೂ ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.