ಮಡಿಕೇರಿ, ಜು. 19: ರಾಜ್ಯ ಸರಕಾರವನ್ನು ವಜಾಗೊಳಿಸ ಬೇಕೆಂದು ಒತ್ತಾಯಿಸಿ ಹಾಗೂ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯ ಕರ್ತರು, ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ತೆರಳಿದ ಪ್ರತಿಭಟನಾ ಕಾರರು, ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಭ್ರಷ್ಟಾಚಾರ, ದುರಾಡಳಿತ, ಕೊಲೆ, ಅಶಾಂತಿ, ಕೋಮುಗಲಭೆಗಳು ರಾಜ್ಯದಲ್ಲಿ ತಾಂಡವವಾಡುತ್ತಿದೆ. ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಹ ವ್ಯವಸ್ಥೆ ಸೃಷ್ಟಿಯಾಗಿದ್ದು, ಎಲ್ಲಾ ರಂಗಗಳಲ್ಲಿ ಆಡಳಿತ ನಡೆಸಲು ಸರಕಾರ ವಿಫಲವಾಗಿದೆ. ಕೊಲೆಗಡುಕರಿಗೆ, ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡುತ್ತಾ ನಿಷ್ಟಾವಂತರಿಗೆ ಶಿಕ್ಷೆ ನೀಡುವ ಆಡಳಿತ ವ್ಯವಸ್ಥೆ ರಾಜ್ಯದಲ್ಲಿದೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ರಾಜ್ಯ ವಕ್ತಾರೆ ಸುಲೋಚನಾಭಟ್, ಇಡೀ ಕರ್ನಾಟಕದಲ್ಲಿ ಇಂದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಇಲಾಖೆ ಮುಖ್ಯಮಂತ್ರಿಗಳ ಅಧೀನದಲ್ಲಿದ್ದು, ಇತ್ತೀಚೆಗೆ ಕಾರಾಗೃಹಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಗಮನಿಸಿದಾಗ ಅಧಿಕಾರಿಗಳ ಮೇಲಿನ ಹಿಡಿತವನ್ನು ಮುಖ್ಯಮಂತ್ರಿಗಳು ಕಳೆದು ಕೊಂಡಿರುವದು ತಿಳಿಯುತ್ತದೆ. ಭ್ರಷ್ಟಾಚಾರ ಬಯಲಿಗೆಳೆಯುವ ನಿಷ್ಟಾವಂತ ಅಧಿಕಾರಿಗಳಿಗೆ ನಮ್ಮ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ತುಷ್ಟೀಕರಣದ ನೀತಿಯನ್ನು ಅಳವಡಿಸಿಕೊಂಡು ಕೋಮು ಸಂಘರ್ಷ ಸೃಷ್ಟಿಸುವ ಕೆಲಸ ಮಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರನ್ನು ಹತ್ಯೆ ಮಾಡಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಆಡಳಿತ ನಡೆಸಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯಪಾಲರು ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂತಿ ಸತೀಶ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.