ಮಡಿಕೇರಿ, ಜು. 19: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು 8 ಗಂಟೆಗೆ ಆರಂಭಿಸಬೇಕೆಂದು ರಾಜ್ಯ ಸರಕಾರ ಆದೇಶ ಹೊರಡಿಸಿರುವ ದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರಕಾರದ ಆದೇಶದಿಂದ ಕೊಡಗಿನ ವಿದ್ಯಾರ್ಥಿ ಗಳಿಗೆ ಸಮಸ್ಯೆಯುಂಟಾಗಿದೆ. ಕೂಡಲೇ 10 ಗಂಟೆಗೆ ತರಗತಿ ಆರಂಭಿಸುವಂತೆ ಆದೇಶ ಹೊರಡಿಸ ಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡ ನವನೀತ್, ಕೊಡಗು ಜಿಲ್ಲೆ ಬೆಟ್ಟ ಗುಡ್ಡಗಳಿಂದ ಕೂಡಿದ್ದು, ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಕಾಲೇಜಿಗೆ ಬರುತ್ತಿದ್ದಾರೆ. ಕೆಲ ಕುಗ್ರಾಮದಲ್ಲಿ 8 ಗಂಟೆಯ ಬಳಿಕವೇ ಬಸ್ ವ್ಯವಸ್ಥೆ ಇದ್ದು, ಅಂತಹ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕೆಲ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಉಪಟಳವೂ ಹೆಚ್ಚಾಗಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿ 10 ಗಂಟೆಗೆ ತರಗತಿ ಆರಂಭಿಸಲು ಸರ್ಕಾರ ಆದೇಶ ಹೊರಡಿಸಬೇಕು. ತಪ್ಪಿದಲ್ಲಿ ಉಗ್ರ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದರು. ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಕ್ಷಿತ್ ಮಾತನಾಡಿ, ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಅರಿತು ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯಬೇಕು. ತಪ್ಪಿದಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕೊಡಗು ಜಿಲ್ಲೆಯಲ್ಲಿ 10 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಆರಂಭಿಸಲು ಆದೇಶ ಹೊರಡಿಸ ಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.