ಕೂಡಿಗೆ, ಜು. 21: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ಉಪ ಕಟ್ಟಡ ಕಾಮಗಾರಿ ಅಪೂರ್ಣಗೊಂಡಿದ್ದು, ಇದರ ಬಗ್ಗೆ ಸಂಬಂಧಪಟ್ಟವರು ಗಮನಹರಿಸದೇ ಗಿಡಗಂಟಿಗಳು ಬೆಳೆದು ಕಟ್ಟಡ ಕಾಡುಮಯವಾಗಿದೆ. ಈ ಭಾಗದ ಜನರಿಗೆ ಅನುಕೂಲವಾಗಲೆಂದು ನಿರ್ಮಿಸಿದ್ದ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯು ಹಲವು ಕಾರಣಗಳಿಂದ ಅರ್ಧಕ್ಕೆ ಸ್ಥಗಿತಗೊಂಡು ಹತ್ತು ವರ್ಷಗಳೇ ಕಳೆದಿದೆ. ಕಟ್ಟಡದ ಒಳಗೆ ಮತ್ತು ಸುತ್ತಲೂ ಗಿಡಗಂಟಿಗಳು ಬೆಳೆದಿದ್ದರೂ ಇದರ ಬಗ್ಗೆ ಇಲಾಖೆಯವರು ಯಾವದೇ ರೀತಿಯ ಕ್ರಮಕೈಗೊಳ್ಳದೆ, ಸುಮ್ಮನಿರುವದು ಸರಿಯಾದ ಕ್ರಮವಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು, ಶಾಸಕರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಜನಪ್ರತಿನಿಧಿಗಳು ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಳ್ಳಬೇಕೆಂದು ಗ್ರಾ.ಪಂ. ಸದಸ್ಯ ರವಿ ಮತ್ತು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.