ಮಡಿಕೇರಿ, ಜು. 23: ಸುಭದ್ರ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳು, ದೂರದೃಷ್ಟಿ, ಮಾರ್ಗದರ್ಶನಗಳನ್ನು ಅಳವಡಿಸಿಕೊಳ್ಳುವದು ಅತ್ಯಗತ್ಯ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ವಿಜು ಸುಬ್ರಮಣಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ವರ್ಷಾಚರಣೆ ಪ್ರಯುಕ್ತ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ‘ತಮಗಿದೋ ನಮ್ಮ ಗೌರವ ನಮನ’ ಮೂರು ನುಡಿ-ನೂರು ದುಡಿ ನುಡಿ ನಮನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಧೀಮಂತ ನಾಯಕ. ಇವರ ಚಿಂತನೆಗಳು, ಸಮಾಜಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಿಸುವಂತಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಸಮಾಜದ ಬಡ ವರ್ಗದವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸದಾ ತುಡಿತ ಹೊಂದಿದ್ದರು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಬೇಕು. ಇವರ ಕಾರ್ಯದಕ್ಷತೆ, ಹೋರಾಟದ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ಶ್ರೀಧರ ಹೆಗಡೆ ಮಾತನಾಡಿದರು. ನಗರಸಭೆ ಪೌರಾಯುಕ್ತೆ ಬಿ. ಶುಭ, ಪ್ರಮುಖರಾದ ಮುತ್ತಪ್ಪ, ಗಣೇಶ್, ದಿವಾಕರ್, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ ಇತರರು ಇದ್ದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ಸ್ವಾಗತಿಸಿ, ರಾಜು ಮತ್ತು ತಂಡದವರು ನುಡಿ ನಮನ ಹಾಡು ಹಾಡಿದರು. ಚರ್ಮವಾದ್ಯ, ಹೋರಾಟದ ಹಾಡುಗಳು, ಜನಪದ ಕಲಾ ಕಾರ್ಯಕ್ರಮ ನಡೆಯಿತು.