ಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಸಮೀಪದ ಬ್ಯಾಡ ಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಬೆಳ್ಳಂಬೆಳಿಗ್ಗೆ ಭೇಟಿ ನೀಡಿ ಕಾಮಗಾರಿ ಗಳನ್ನು ಪರಿಶೀಲಿಸಿದರು. ನಂತರ ಆದಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಅವರಿಗೆ ಸಿಗುತ್ತಿರುವ ಆಹಾರ ಮತ್ತು ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಯ ಪರಿಶೀಲನೆ ನಡೆಸಿದರು. ಹಂತ ಹಂತವಾಗಿ ನಡೆಯುತ್ತಿರುವ ಮನೆ ನಿರ್ಮಾಣ ಕಾಮಗಾರಿಯನ್ನು, ಕಾಮಗಾರಿಗೆ ಬಳಸುತ್ತಿರುವ ವಸ್ತುಗಳನ್ನು ಖುದ್ದಾಗಿ ತೆರಳಿ ಅವುಗಳ ಗುಣಮಟ್ಟವನ್ನು ವೀಕ್ಷಿಸಿ, ಮನೆಯ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ನಂತರ ಸಮೀಪದ ಬಸವನಹಳ್ಳಿ ಯಲ್ಲಿರುವ ಆದಿವಾಸಿಗಳ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ,

(ಮೊದಲ ಪುಟದಿಂದ) ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಮ್ಮ ತಮ್ಮ ಕಾರ್ಯವ್ಯಾಪ್ತಿಯ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಆದೇಶ ನೀಡಿದರು.

ಆದಿವಾಸಿಗಳ ಆಧಾರ್ ಕಾರ್ಡ್, ಗುರುತಿನ ಚೀಟಿಗಳ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಶೀಘ್ರವಾಗಿ ಆದಿವಾಸಿಗಳಿಗೆ ವಿತರಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಕೇಂದ್ರಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪೈಪ್ ಲೈನ್ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕೆಂದು ಪಂಚಾಯ್ತಿ ಕುಡಿಯುವ ನೀರು ಯೋಜನಾ ಅಧಿಕಾರಿಗೆ ಸೂಚನೆ ನೀಡಿ, ಕೇಂದ್ರದ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿ ಶುಚಿತ್ವ ಕಾಪಾಡಬೇಕೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಬಸವನಹಳ್ಳಿ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಸ್.ಎನ್. ರಾಜಾರಾವ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಮೇಗೌಡ, ಪ್ರಕಾಶ್, ಜಿಲ್ಲಾ ಭೂಸೇನೆ ಅಧಿಕಾರಿ ಪಾಂಡುರಂಗ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.