ಸೋಮವಾರಪೇಟೆ, ಜು. 29: ಕೊಡಗು ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಮಾಡುವದಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಹೇಳಿಕೆ ನೀಡುತ್ತಿರುವದು ಖಂಡನೀಯ. ಕಳೆದ ನಾಲ್ಕು ಬಾರಿ ಶಾಸಕರಾಗಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗದ ಶಾಸಕರು ಇದೀಗ ಕಾಂಗ್ರೆಸ್ ಮುಕ್ತ ಮಾಡುವದಾಗಿ ಹೇಳುತ್ತಿರುವದು ಖಂಡನೀಯ ಎಂದು ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ. ಮಿಥುನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದೆ. ಕೊಡಗು ಸೇರಿದಂತೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಅರ್ಹತೆ ಶಾಸಕ ರಂಜನ್ ಅವರಿಗಿಲ್ಲ ಎಂದು ಮಿಥುನ್ ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಡಿಕೇರಿ ಸೇರಿದಂತೆ ಕೊಡಗಿನ ಎರಡೂ ಕೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಲಿದ್ದು, ಕಾಂಗ್ರೆಸ್ ಮುಕ್ತ ಹೇಳಿಕೆಗೆ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅಭಿಪ್ರಾಯಿಸಿದ್ದಾರೆ.