ಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗುವದರಿಂದ ಮಕ್ಕಳಿಗೆ ಎಲ್ಲಾ ಸೌಲಭ್ಯಗಳು ದೊರಕಿದಂತಾಗುತ್ತದೆ. ಇವುಗಳನ್ನು ಸ್ಥಳೀಯರು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಸವನಹಳ್ಳಿ ಸಹಕಾರ ಬ್ಯಾಂಕಿನ ಅದ್ಯಕ್ಷ ಎಸ್.ಎನ್.ರಾಜಾರಾವ್ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುಟ್ಟ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿಯರಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಇವುಗಳ ಸವಲತ್ತುಗಳು ಅರ್ಹರಿಗೆ ತಲುಪಲು ಅಂಗನವಾಡಿ ಕೇಂದ್ರಗಳು ನಿರ್ಮಾಣವಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳು ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಗೆ ಸರಿಸಮಾನವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್‍ಕುಮಾರ್, ಗ್ರಾ.ಪಂ ಸದಸ್ಯರುಗಳಾದ ಮಂಜಯ್ಯ, ರಾಮಚಂದ್ರ, ಜಯಶ್ರೀ, ಪುಷ್ಪ, ಚಂದ್ರಿಕ, ಕಲ್ಪನಾ, ರೇಣುಕಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಯಶೋದ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸ್ವಾಮಿನಾಯಕ್, ಜೇನುಕಲ್ಲು ಬೆಟ್ಟ ಶಾಲಾ ಮುಖ್ಯೋಪಾಧ್ಯಾಯ ತಮ್ಮಯ್ಯ, ನಿವೃತ್ತ ಶಿಕ್ಷಕ ಯೋಗೇಂದ್ರ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಇದ್ದರು. ಅಂಗನವಾಡಿ ಕಾರ್ಯಕರ್ತೆ ಎನ್ಸಿ ಸ್ವಾಗತಿಸಿ, ಮಂಜುಳ ವಂದಿಸಿದರು.