ಮಡಿಕೇರಿ, ಆ. 2: ಜಂತುಹುಳು ನಿವಾರಣಾ ಕಾರ್ಯಕ್ರಮ ಅಂಗವಾಗಿ ತಾ. 10 ರಂದು ಅಂಗನವಾಡಿ ಮತ್ತು ಶಾಲೆಗಳಲ್ಲಿ ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಹೆಚ್. ಅಧಿಕಾರಿ ಡಾ. ನಿಲೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಜಂತು ಹುಳು ನಿವಾರಣಾ ಮಾತ್ರೆ ನೀಡುವ ಕಾರ್ಯಕ್ರಮ ತಾ. 10 ರಂದು ನಡೆಯಲಿದೆ. ಆ ದಿಸೆಯಲ್ಲಿ ಅಗತ್ಯ ಮಾತ್ರೆಗಳು ಈಗಾಗಲೇ ದಾಸ್ತಾನು ಇದ್ದು, ಅಂದು ಎಲ್ಲಾ ಅಂಗನವಾಡಿಗಳು ಹಾಗೂ ಶಾಲೆಗಳಿಗೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪೂರೈಕೆಯಾಗಲಿದೆ.

ಒಂದರಿಂದ ಎರಡು ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ ನೀಡಲಾಗುತ್ತದೆ. 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಒಂದು ಮಾತ್ರೆ ನೀಡಲಾಗುತ್ತದೆ. ಈ ಮಾತ್ರೆಯನ್ನು ಮಕ್ಕಳಿಗೆ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ನಂತರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಜಂತುಹುಳು ಮಾತ್ರೆ ಪಡೆಯುವದರಿಂದ ಮಕ್ಕಳ ಮಾನಸಿಕ ಬೆಳವಣಿಗೆ ಜೊತೆಗೆ ಕಲಿಕೆ ಪ್ರಮಾಣ ಹೆಚ್ಚಳವಾಗಲಿದೆ ಎಂದು ಅವರು ಮಾಹಿತಿ ನೀಡಿದ ಅವರು ಜಂತು ಹುಳು ನಿವಾರಣಾ ಮಾತ್ರೆಯನ್ನು ಜಗಿದು ತಿನ್ನಬೇಕು. ಈ ಮಾತ್ರೆ ಪಡೆಯುವದರಿಂದ ಕಳೆದ ವರ್ಷ ಶೇ. 99.63 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಡಾ. ನಿಲೇಶ್ ಹೇಳಿದರು.

ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಐಟಿಡಿಪಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು, ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಡಾ. ನಿಲೇಶ್ ಕೋರಿದರು.

ಜಂತುಹುಳು ನಿವಾರಣಾ ಕಾರ್ಯಕ್ರಮ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಟ್ ಡಿಸೋಜ ಅವರು ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಕುಮಾರ್ (ಪ್ರಬಾರ), ಡಾ. ಆಶಾ, ಡಾ. ಪುರುಷೋತ್ತಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಸಾವಿತ್ರಿ, ಮಂಜುಳಾ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರಮೇಶ್, ಪಾಲಾಕ್ಷ, ಪುಟ್ಟಪ್ಪ, ಜಿಲ್ಲಾ ಸರ್ವೇಕ್ಷಣಾ ಘಟಕದ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕಿ ಆಶಾ ಇತರರು ಇದ್ದರು.