ಮಡಿಕೇರಿ, ಆ.10 : ಜಂತುಹುಳು ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ದೈಹಿಕ ಬೆಳವಣಿಗೆ ಕುಂಠಿತವಾಗುವದರಿಂದ ಜಂತುಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸುವದು ಅತ್ಯಗತ್ಯವಾಗಿದೆ ಎಂದು ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಪಿ.ಸುಬ್ರಮಣಿ ಸಲಹೆ ಮಾಡಿದ್ದಾರೆ.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರತಿಯೊಬ್ಬರೂ ಆರೋಗ್ಯ ಯುತವಾಗಿದ್ದಲ್ಲಿ ಸದೃಢ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಜಂತುಹುಳು ದೇಹಕ್ಕೆ ಪ್ರವೇಶ ಮಾಡುವದರಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲಾಖೆಗಳು ಕೈಜೋಡಿಸುವಂತೆ ಕೋರಿದರು.
ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಅವುಗಳ ಜೊತೆಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಮಕ್ಕಳು ಆರೋಗ್ಯಯುತ ರಾಗಿದ್ದಲ್ಲಿ ಪಾಠ ಪ್ರವಚನ, ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ಹಲವು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಯಾವದೇ ರೀತಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತದೆ. ಮಕ್ಕಳು ಆರೋಗ್ಯವಂತರಾಗಿರಲು ಈ ಮಾತ್ರೆ ಪಡೆಯುವಂತಾಗಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್. ಅಧಿಕಾರಿ ಡಾ. ನಿಲೇಶ್ ಮಾತನಾಡಿ, ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.
ದೇಶದಲ್ಲಿ 10 ರಲ್ಲಿ 7 ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಜಂತುಹುಳು ಕಾರಣವಾಗಿದೆ. ಜಂತುಹುಳು ನಿವಾರಣೆ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ ಜಂತುಹುಳು ನಿವಾರಣೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕುಟುಂಬದವರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ರಾಮಚಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ ಇತರರು ಇದ್ದರು. ರಮೇಶ್ ನಿರೂಪಿಸಿದರು. ಪಾಲಾಕ್ಷ ಸ್ವಾಗತಿಸಿದರು, ಕಿರಣ್ ವಂದಿಸಿದರು.