ಸೋಮವಾರಪೇಟೆ, ಆ. 13: ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದರೆ ಯಾವದೇ ಅಭಿವೃದ್ಧಿ ಅಸಾಧ್ಯ. ಪರಿಸರ, ಆರೋಗ್ಯ ಹಾಗೂ ಆರ್ಥಿಕ ಕ್ಷೇತ್ರಗಳ ಅಭಿವೃದ್ಧಿಗೆ ಕೃಷಿಯೇ ತಳಪಾಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೃಷಿ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರೋಗ್ಯಪೂರ್ಣ ಸಿರಿಧಾನ್ಯಗಳನ್ನು ಬೆಳೆಸಲು ಮಾರ್ಗದರ್ಶನ ಹಾಗೂ ಪ್ರೇರೇಪಣೆ ನೀಡುತ್ತಿದ್ದು, ಕೃಷಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಾಜಶೇಖರ್ ಮಾತನಾಡಿ, ಸರಕಾರ ಕೃಷಿ ಭಾಗ್ಯ ಯೋಜನೆಯನ್ನು ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಿಗೂ ವಿಸ್ತರಿಸಿದೆ.
ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ 900 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ.
ಸರಕಾರ ಸಿರಿಧಾನ್ಯಗಳನ್ನು ಬೆಳೆಯಲು ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಇಲಾಖೆ ನೀಡುವ ಸವಲತ್ತುಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ಹೆಚ್ಚು ಪೌಷ್ಟಿಕಾಂಶ ಹೊಂದಿರುವ ಸಿರಿಧಾನ್ಯಗಳನ್ನು ಬೆಳೆದು, ಆಹಾರವಾಗಿ ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ ಎಂದರು.
ವೇದಿಕೆಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಸೀತಾರಾಮ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ಪ್ರಗತಿಪರ ಕೃಷಿಕ ಶಾಂತಳ್ಳಿಯ ಕೆ.ಎಸ್. ಸುಂದರ್, ಹಾಸನದ ಭೂಮಿ ಸುಸ್ಥಿರ ಅಭಿವೃದ್ಧಿ ಸಂಸ್ಥೆಯ ಜಯಪ್ರಸಾದ್ ಬಳ್ಳೆಕೆರೆ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕೆ. ಪುಟ್ಟಸ್ವಾಮಿ, ಯೋಜನೆಯ ಮೇಲ್ವಿಚಾರಕ ರಮೇಶ್, ಕೃಷಿ ಅಧಿಕಾರಿ ಗೀತಾ ಹಾಗೂ ಶಾಂತಳ್ಳಿ ವಲಯ ಮೇಲ್ವಿಚಾರಕಿ ರೇವತಿ ಉಪಸ್ಥಿತರಿದ್ದರು.
ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ಯೋಜನೆಯ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.