ಸೋಮವಾರಪೇಟೆ, ಆ. 15: ನಾಲ್ಗುಡಿ ಸಂಸ್ಥೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಇವರ ಆಶ್ರಯದಲ್ಲಿ ತಾ. 17 ರಂದು ಒಕ್ಕಲಿಗರ ಸಮುದಾಯಭವನದಲ್ಲಿ ವಿದ್ಯಾರ್ಥಿಗಳಿಗೆ “ನಾನು ಮತ್ತು ಪರೀಕ್ಷೆ” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ನಾಲ್ಗುಡಿ ಸಂಸ್ಥೆಯ ಸಂಚಾಲಕ ಚಾಮೇರ ದಿನೇಶ್ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಾಗಾರವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಉದ್ಘಾಟಿಸಿ, ಪರೀಕ್ಷಾ ಸಿದ್ದತೆಯ ಬಗ್ಗೆ ಉಪಯುಕ್ತ ಮಾಹಿತಿ ನೀಡಲಿದ್ದಾರೆ. ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮಾನಸಿಕ ತಜ್ಞರಾದ ಡಾ.ರೂಪೇಶ್ ಅವರು ಪರೀಕ್ಷಾ ಸಂದರ್ಭ ಮಾನಸಿಕ ಸಿದ್ದತೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಎಸ್. ಮಹೇಶ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದ್ಯಮಿ ನಾಪಂಡ ಮುತ್ತಪ್ಪ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬಿಇಒ ಮಲ್ಲೇಸ್ವಾಮಿ, ಕುವೆಂಪು ವಿದ್ಯಾಸಂಸ್ಥೆಯ ಕರೆಸ್ಪಾಂಡೆಂಟ್ ಲಿಂಗರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಪಿ.ಧರ್ಮಪ್ಪ, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಬಿ.ಜೆ.ದೀಪಕ್, ಭಾಗವಹಿಸಲಿದ್ದಾರೆ ಎಂದರು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಎಂದು ದಿನೇಶ್ ತಿಳಿಸಿದರು. ಗೋಷ್ಠಿಯಲ್ಲಿ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಸ್.ಮಹೇಶ್, ಕಾರ್ಯದರ್ಶಿ ಪ್ರೇಮ್‍ಕುಮಾರ್, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸ್ವಾಮಿ ವಿವೇಕಾನಂದ ಬ್ರಿಗೇಡ್‍ನ ಅಧ್ಯಕ್ಷ ಅಭಿಷೇಕ್ ಇದ್ದರು.