ಮಡಿಕೇರಿ, ಆ. 20: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸುಳ್ಳು ದೂರು ನೀಡಿದ ಸರಕಾರದ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಡಿಕೇರಿ ನಗರ ಬಿಜೆಪಿ ವತಿಯಿಂದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲಾಯಿತು.ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್ ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರ ಮೇಲೆ ಸುಳ್ಳು ಆರೋಪ ಹೊರಿಸಿ ಮೊಕದ್ದಮೆ ದಾಖಲಾಗುವಂತೆ ಎಸಿಬಿ ಮೇಲೆ ಒತ್ತಡ ಹೇರಲಾಗಿದೆ. ಅಧಿಕಾರಿಗಳನ್ನು ದುರ್ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ನಗರಸಭಾ ಸದಸ್ಯರಾದ ಪಿ.ಡಿ. ಪೊನ್ನಪ್ಪ, ಕೆ.ಎಸ್. ರಮೇಶ್, ಟಿ.ಎಸ್. ಪ್ರಕಾಶ್ ಹಾಗೂ ಇನ್ನಿತರರು ಇದ್ದರು.
*ಗೋಣಿಕೊಪ್ಪ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸುಳ್ಳು ದೂರು ನೀಡಿದ ಸರಕಾರದ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವೀರಾಜಪೇಟೆ ತಾಲೂಕು ಬಿ.ಜೆ.ಪಿ.
(ಮೊದಲ ಪುಟದಿಂದ) ವತಿಯಿಂದ ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು.
ಕೃಷಿ ಉತ್ತನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿ ಸರಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಘೋಷಣೆ ಹಾಕಿ ಪ್ರತಿಭಟಿಸಿದರು.
ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ದೂರುಗಳನ್ನು ನೀಡಿ ಯಡಿಯೂರಪ್ಪ ಅವರನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಭ್ರಷ್ಟ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೆ.ಜಿ. ಬೋಪಯ್ಯ ಒತ್ತಾಯಿಸಿದರು.
ಮುಖ್ಯಮಂತ್ರಿಗಳ ಕುತಂತ್ರದಿಂದ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ನ್ಯಾಯ ಕಾಣುತ್ತಿಲ್ಲ. ಅನ್ಯಾಯದ ಮಾರ್ಗದಲ್ಲಿ ಕಾಂಗ್ರೆಸ್ ಸರಕಾರ ಯಡಿಯೂರಪ್ಪರ ಮೇಲೆ ಆರೋಪ ಮಾಡುತ್ತಿದೆ. 4 ವರ್ಷಗಳ ಭ್ರಷ್ಟ ಆಡಳಿತ ಪೂರೈಸಿದ ಕಾಂಗ್ರೆಸ್ ಈ ಹಿಂದೆಯೇ ಘಟನೆಯನ್ನು ಆಧರಿಸಿ ದೂರು ನೀಡಿಬಹುದಾಗಿತ್ತು. ಆದರೆ ಅಧಿಕಾರಿಗಳನ್ನು ತಮ್ಮ ಮುಷ್ಟಿಯಲ್ಲಿ ಬಂಧಿಸಿ ಭ್ರಷ್ಟಾಚಾರಕ್ಕೆ ಮುಂದಾಗಿ ದ್ದಾರೆ ಎಂದು ಆರೋಪಿಸಿದರು.
ರಾಜ್ಯ ಬಿ.ಜೆ.ಪಿ. ಕಾರ್ಯದರ್ಶಿ ಮನು ಮುತ್ತಪ್ಪ ಮಾತನಾಡಿ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರ ರಾಜೀನಾಮೆ ನೀಡಬೇಕಾಗಿದೆ. ಭ್ರಷ್ಟ ಆಡಳಿತದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಂಧನ ಸಚಿವರ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಅಕ್ರಮ ನಗದು ಪತ್ತೆಯಾಗಿದೆ. ಆದರೆ ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡಿ ಪ್ರಕರಣವನ್ನು ಮುಚ್ಚಿ ಹಾಕುವಲ್ಲಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಮಾತನಾಡಿ, ನೈತಿಕತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ ಜನರನ್ನು ಮುಜುಗರಕ್ಕೀಡುಮಾಡುತ್ತಿದೆ. ಭ್ರಷ್ಟಾಚಾರ ಪ್ರಕರಣಗಳಿಂದ ಮತ ನೀಡಿದ ಜನರೆ ತಲೆತಗ್ಗಿಸುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳಿದರು.
ಈ ಸಂದÀರ್ಭ ಜಿಲ್ಲಾ ವರ್ತಕರ ಪ್ರಕೋಷ್ಠ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರುಗಳಾದ ಪಟ್ರಪಂಡ ರಘು ನಾಣಯ್ಯ, ಕಾಂತಿ ಸತೀಶ್, ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ಶಶಿ ಸುಬ್ರಮಣಿ, ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಕುಟ್ಟಂಡ ಅಜಿತ್ ಕರುಂಬಯ್ಯ, ಜಯಾ ಪೂವಯ್ಯ, ಆರ್.ಎಂ.ಸಿ. ಅಧ್ಯಕ್ಷ ಸುವಿನ್ ಗಣಪತಿ, ಸದಸ್ಯರುಗಳಾದ ವಿನು ಚಂಗಪ್ಪ, ಕಿಲನ್ ಗಣಪತಿ, ಸುಜಾ ಪೂಣಚ್ಚ, ಯುವ ಮೋರ್ಚ ಜಿಲ್ಲಾ ಕಾರ್ಯದರ್ಶಿ ಗಪ್ಪಣ್ಣ, ಜಿಲ್ಲಾ ಕಾರ್ಯದರ್ಶಿ ರಾಬಿನ್ ದೇವಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೀವನ್, ಕಾಫಿ ಬೋರ್ಡ್ ಸದಸ್ಯ ಮಚ್ಚಮಾಡ ಡಾಲಿ, ಪ.ಪಂ. ಮಾಜಿ ಅಧ್ಯಕ್ಷೆ ದೇಚಮ್ಮ, ರಾಜ್ಯ ಯುವಮೋರ್ಚ ಕಾರ್ಯದರ್ಶಿ ಶಶಾಂಕ್ ಭೀಮಯ್ಯ, ತಾಲೂಕು ಪೆಡರೇಷನ್ ಉಪಧ್ಯಕ್ಷ ಮಲ್ಲಂಡ ಮಧು ದೇವಯ್ಯ, ಬಿರುನಾಣಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಯ್ ತಿಮ್ಮಯ್ಯ, ತಿತಿಮತಿ ಸ್ಥಾಯಿ ಸಮಿತಿ ಅಧ್ಯಕ್ಷ ಅನೂಪ್, ಅರುವತೋಕ್ಲು ಸ್ಥಾನೀಯ ಸಮಿತಿ ಅಧ್ಯಕ್ಷ ಮನೆಯಪಂಡ ಸೋಮಯ್ಯ, ಪೊನ್ನಂಪೇಟೆ ಸ್ಥಾಯಿ ಸಮಿತಿ ಅಧ್ಯಕ್ಷ ಮುದ್ದಿಯಡ ಮಂಜು, ಶೆಟ್ಟಿಗೇರಿ ಸ್ಥಾನೀಯ ಸಮಿತಿ ಅಧ್ಯಕ್ಷ ಕಟ್ಟೇರ ಈಶ್ವರ, ವೀರಾಜಪೇಟೆ ಸ್ಥಾಯಿ ಸಮಿತಿ ಅಧ್ಯಕ್ಷ ಅಂಜಪರವಂಡ ಅನಿಲ್, ಉಪಾಧ್ಯಕ್ಷ ಕಾವೇರಿ ಮಂದಣ್ಣ, ಜಿ.ಪಂ. ಮಾಜಿ ಸದಸ್ಯರುಗಳಾದ ರಂಜನ್, ತಾ.ಪಂ. ಮಾಜಿ ಅಧ್ಯಕ್ಷೆ ರಾಣಿ ನಾರಾಯಣ, ತಾಲೂಕು ಕಾರ್ಯದರ್ಶಿ ಲಾಲ ಭೀಮಯ್ಯ ಸೇರಿದಂತೆ ಪೊನ್ನಂಪೇಟೆ, ಗೋಣಿಕೊಪ್ಪ ಗ್ರಾ.ಪಂ. ಸದಸ್ಯರುಗಳು, ಕಾರ್ಯಕರ್ತರುಗಳು ಹಾಜರಿದ್ದರು.
ಸುಂಟಿಕೊಪ್ಪ: ರಾಜ್ಯ ಭಾರತೀಯ ಜನತಾಪಾರ್ಟಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ಧ ರಾಮಯ್ಯ ಹಳೆಯ ಕೇಸನ್ನು ಕೆದಕಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ಅಸ್ತ್ರವಾಗಿ ಬಳಸಿ ಎಫ್ಐಆರ್ ದಾಖಲಿಸಿ ಯಡಿಯೂರಪ್ಪ ಅವರನ್ನು ಹೆಣೆಯಲು ಮುಂದಾಗಿದ್ದಾರೆ. ಇದು ಸೇಡಿನ ರಾಜಕೀಯವಾಗಿದೆ. ಯಡಿಯೂರಪ್ಪ ವಿರುದ್ಧ ಸುಳ್ಳು ಸಾಕ್ಷ್ಯ ಹೇಳಬೇಕೆಂದು ಎಸಿಬಿ ಅಧಿಕಾರಿಗಳು ಕೆಎಎಸ್ ಅಧಿಕಾರಿ ಬಸವ ರಾಜೇಂದ್ರರಿಗೆ ಒತ್ತಡ ಹೇರುತ್ತಿರುವ ಬಗ್ಗೆ ಆ ಅಧಿಕಾರಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇದು ಖಂಡನೀಯ ಎಂದು ಕಂಬಿಬಾಣೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಡಾ. ಶಶಿಕಾಂತರೈ ಆಗ್ರಹಿಸಿದರು.
ಮಡಿಕೇರಿ ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಪಿ.ಕೆ. ಶೇಷಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಾಲಾವತಿ, ಪಂಚಾಯಿತಿ ಸದಸ್ಯ ಬಿ.ಎಂ.ಸುರೇಶ್, ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ, ನಗರಾಧ್ಯಕ್ಷ ಪಿ.ಆರ್. ಸುನೀಲ್, ಪ್ರಧಾನ ಕಾರ್ಯದರ್ಶಿ ಬಿ.ಕೆ. ಪ್ರಶಾಂತ್, ಕೆದಕಲ್ ಪಂಚಾಯಿತಿ ಮಾಜಿ ಸದಸ್ಯ ರಮೇಶ್ ರೈ, ಆಶೋಕ್, ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾಮೇದಪ್ಪ, ಓಡಿಯಪ್ಪನ ಸುಧೀಶ್ ಮತ್ತಿತರರು ಇದ್ದರು.
ಕುಶಾಲನಗರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರದ ಪ್ರಭಾವ ಬಳಸಿ ಬಿಜೆಪಿ ನಾಯಕ ಯಡಿಯೂರಪ್ಪ ವಿರುದ್ಧ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನಗರ ಬಿಜೆಪಿ ಘಟಕದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು. ಎಸಿಬಿ ದುರ್ಬಳಕೆ ಹೊಣೆಹೊತ್ತು ಕೂಡಲೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿ ಯಾಗುವದನ್ನು ತಪ್ಪಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಮುಗಿದುಹೋದ ಡಿನೋಟಿಪಿಫೈ ಪ್ರಕರಣಕ್ಕೆ ಮರುಜೀವ ನೀಡುವ ಹುನ್ನಾರ ಮಾಡಿದ್ದಾರೆ. ತಮ್ಮ ಅಧಿಕಾರ ಬಳಸಿ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ. ಮನು, ಕಾರ್ಯದರ್ಶಿ ಶಿವಾಜಿರಾವ್, ಯುವಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ನಗರ ಘಟಕದ ಕಾರ್ಯದರ್ಶಿ ನಿಡ್ಯಮಲೆ ದಿನೇಶ್, ಪ್ರಮುಖರಾದ ಜಿ.ಎಲ್. ನಾಗರಾಜ್, ವಿ.ಡಿ. ಪುಂಡರೀಕಾಕ್ಷ, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಭಾಸ್ಕರ್ ನಾಯಕ್, ದೇವರಾಜ್, ಹೆಚ್.ಎನ್. ರಾಮಚಂದ್ರ, ನಿಸಾರ್ ಅಹಮ್ಮದ್, ವೈಶಾಖ್, ಪ್ರವೀಣ್ ಮತ್ತಿತರರು ಇದ್ದರು.