ಮಡಿಕೇರಿ, ಆ. 28: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಮಹಿಳಾ ಘಟಕಗಳು ಈಗಿನಿಂದಲೇ ಕಾರ್ಯೋನ್ಮುಖವಾಗಬೇಕೆಂದು ಮಹಿಳಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ ಕರೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹಿಳಾ ಕಾಂಗ್ರೆಸ್‍ನ ನೂತನ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿಯ ಚುನಾವಣೆಯಲ್ಲಿ ಮಹಿಳಾ ಘಟಕದ ಜವಬ್ದಾರಿ ದೊಡ್ಡದಿದ್ದು, ಬ್ಲಾಕ್ ಹಾಗೂ ವಿಭಾಗಗಳಲ್ಲಿ ಪಕ್ಷ ಸಂಘಟನೆಯನ್ನು ಚುರುಕುಗೊಳಿಸಬೇಕೆಂದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಮಹಿಳಾ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಪ್ರತಿ ಬೂತ್ ಮಟ್ಟದಲ್ಲಿ ಮಹಿಳಾ ಕಾರ್ಯಕರ್ತರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಅಭ್ಯರ್ಥಿಗಳ ಗೆಲುವಿಗೆ ಪಣ ತೊಡಬೇಕೆಂದು ಪುಷ್ಪಲತಾ ಕರೆ ನೀಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಪಕ್ಷ ಸಂಘಟನೆಯ ಕುರಿತು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ವಿವಿಧ ಜವಬ್ದಾರಿಗಳನ್ನು ನೀಡಲಾಯಿತು. ಮಹಿಳಾ ಕಾಂಗ್ರೆಸ್‍ನ ಐದು ಬ್ಲಾಕ್‍ಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಹಿರಿಯ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡು ಸಾಧಕ, ಬಾಧಕಗಳ ಬಗ್ಗೆ ಚರ್ಚಿಸಿದರು.