ಸೋಮವಾರಪೇಟೆ, ಆ. 29: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್ ಹೇಳಿದರು.

ಐಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಹಲವಾರು ಅವಕಾಶಗಳಿವೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿರುವದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಜಾನಪದ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಎಸ್.ಎ.ಮುರಳೀಧರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಆರಂಭವಾದ ನಂತರ ಸಂಗೀತ, ನೃತ್ಯ ಹಾಗೂ ಹಾಡುಗಾರಿಕೆಯಂತಹ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ಐಗೂರು ಪದವಿಪೂರ್ವ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಉಮೇಶ್‍ಕುಮಾರ್ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ಕೆ.ಬಸವರಾಜು, ಐಗೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯಶವಂತ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ, ಸಂತಜೋಸೆಫರ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಬಾಷಾ, ಸಿಆರ್‍ಪಿ ಅಶೋಕ್ ಉಪಸ್ಥಿತರಿದ್ದರು. ಶಿಕ್ಷಕ ಅಜಿತ್‍ಕುಮಾರ್ ನಿರೂಪಿಸಿದರೆ, ರಮೇಶ್ ವಂದಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ, ನಾಟಕ, ಕಂಸಾಳೆ ನೃತ್ಯ, ಜಾನಪದ ನೃತ್ಯ, ಕೋಲಾಟ, ಕಂಠಪಾಠ, ಮಣ್ಣಿನ ಕಲಾಕೃತಿಗಳು, ಭಾವಗೀತೆ, ದೇಶಭಕ್ತಿ ಗೀತೆ, ರಂಗೋಲಿ, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.