ಮಡಿಕೇರಿ, ಆ. 31: ಸರ್ಕಾರದ ನಾನಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಮೀಸಲಿಟ್ಟಿರುವ ವಿವಿಧ ಕಾರ್ಯ ಕ್ರಮಗಳ ಅನುದಾನವನ್ನು ಕಾಲಮಿತಿ ಯೊಳಗೆ ಖರ್ಚು ಮಾಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ಸಾರ್ವಜನಿಕ ಶಿಕ್ಷಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ನಗರಾಭಿವೃದ್ಧಿ, ಲೋಕೋಪಯೋಗಿ, ವೈದ್ಯಕೀಯ ಶಿಕ್ಷಣ, ಆರೋಗ್ಯ, ಕಾರ್ಮಿಕ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗಾಗಿ ಸಾಕಷ್ಟು ಕಾರ್ಯಕ್ರಮಗಳಿದ್ದು, ಅವುಗಳನ್ನು ಅರ್ಹರಿಗೆ ತಲುಪಿಸಿ ಪ್ರಗತಿಯ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಭೂಮಿ ಇಲ್ಲದ ಪರಿಶಿಷ್ಟರ ಸಂಖ್ಯೆ ಹೆಚ್ಚಿದೆ. ಸೌಲಭ್ಯಗಳನ್ನು ತಲುಪಿಸಲು ಕಷ್ಟಸಾಧ್ಯ ಎಂಬ ಮಾತುಗಳು ಕೇಳಿ ಬರುತ್ತವೆ. ಆದರೂ ಸರ್ಕಾರದ ಕಾರ್ಯಕ್ರಮ ಗಳನ್ನು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಲವು ರೀತಿಯ ಪ್ರಯತ್ನಗಳು ನಡೆಯುತ್ತಲೇ ಬಂದಿವೆ. ಇದಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದರೆ ಇವು ಎಷ್ಟರ ಮಟ್ಟಿಗೆ ತಲುಪಿವೆ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

ಸೌಲಭ್ಯ ಪಡೆದವರು ಸ್ವತಃ ಬಳಸಿಕೊಳ್ಳುತ್ತಿದ್ದಾರೆಯೇ ಅಥವಾ ದುರುಪಯೋಗ ಪಡಿಸಿಕೊಂಡಿ ದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯಲ್ಲಿ ಬಾಕಿ ಇರುವ ವಸತಿ, ರಸ್ತೆ, ಸಮುದಾಯ ಭವನ, ಕುಡಿಯುವ ನೀರು ಮತ್ತಿತರ ಕಾರ್ಯಕ್ರಮಗಳನ್ನು ಕಾಲಮಿತಿ ಯೊಳಗೆ ಪೂರ್ಣಗೊಳಿಸುವಂತೆ ಜಿ.ಪಂ. ಇಂಜಿನಿಯರ್‍ಗಳಿಗೆ ನಿರ್ದೇಶನ ನೀಡಿದರು. ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಕೆಯ ಉಪ ನಿರ್ದೇಶಕ ದಾನೋಜಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಆನಂದ್, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ, ಸಿ. ಜಗನ್ನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಜಗದೀಶ್, ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ರಮೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗಳಾದ ಫಡ್ನೇಕರ್, ಜೀವನ್ ಕುಮಾರ್, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಮೇರಿ ನಾಣಯ್ಯ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಗಳಾದ ಚೆನ್ನಬಸವಯ್ಯ, ರಾಮೇಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.