ಸೋಮವಾರಪೇಟೆ, ಸೆ.4 : ತಾಲೂಕಿನ ಮಾದಾಪುರದ ನಂದಿಮೊಟ್ಟೆ ರಸ್ತೆಯಲ್ಲಿ ನೂತನವಾಗಿ ತೆರೆಯಲಾಗಿರುವ ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕಚೇರಿಯ ಉದ್ಘಾಟನೆ ಮತ್ತು ಕಾನೂನು ಅರಿವು ಕಾರ್ಯಾ ಗಾರ ತಾ. 9ರಂದು ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಹೆಚ್.ಎಂ. ಸೋಮಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾ. 9ರಂದು ಪೂರ್ವಾಹ್ನ 9.30 ಗಂಟೆಗೆ ಮಹಾಗಣಪತಿ ದೇವಸ್ಥಾನದಿಂದ ಮೆರವಣಿಗೆ ತೆರಳಿ ಕಚೇರಿಯನ್ನು ಉದ್ಘಾಟಿಸಲಾಗುವದು. 10 ಗಂಟೆಗೆ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ನೀಡಿದರು.

ಸೋಮವಾರಪೇಟೆ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್, ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ಮುರಳೀಧರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ದಕ್ಷಿಣ ಕನ್ನಡ ಜಿಲ್ಲಾ ಸಂಘದ ಅಧ್ಯಕ್ಷ ಮೋಹನ್ ನೆಲ್ಲಿಗುಂಡಿ, ಕೊಡಗು ಗೌರವಾಧ್ಯಕ್ಷ ಪಿ.ಬಿ. ಬಾಬು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ಕೊಡಗಿನ ಮೂರು ತಾಲೂಕುಗಳಲ್ಲಿಯೂ ಆದಿ ದ್ರಾವಿಡ ಸಮಾಜವನ್ನು ಸಂಘಟಿಸಲಾಗುತ್ತಿದ್ದು, ಗ್ರಾಮ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗುತ್ತಿದೆ. ಸಮುದಾಯ ಬಾಂಧವರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿಕೊಡಲೂ ಸಹ ಸಂಘ ಕೆಲಸ ಮಾಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಸೇವಾ ಸಂಘದ ಗೌರವಾಧ್ಯಕ್ಷ ಪಿ.ಬಿ. ಬಾಬು, ಉಪಾಧ್ಯಕ್ಷ ಪಿ.ಎಲ್. ಸುರೇಶ್, ಪ್ರಧಾನ ಕಾರ್ಯದರ್ಶಿ ಕೆ. ಉಮೇಶ್, ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಮೋಣಪ್ಪ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕುಮಾರ, ಕಪ್ಪೆಗುಂಡಿ ಸಮಿತಿ ಅಧ್ಯಕ್ಷ ಹೆಚ್.ಎಸ್. ರಾಜು ಉಪಸ್ಥಿತರಿದ್ದರು.