ಸೋಮವಾರಪೇಟೆ,ಸೆ.5: ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರಗಳು ಕೋಟ್ಯಾಂತರ ರೂಪಾಯಿ ವ್ಯಯಿಸುತ್ತಿದ್ದರೂ ಸಹ ಪ್ರತಿ 100 ಮಕ್ಕಳಲ್ಲಿ 4 ಮಂದಿ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣದಿಂದ ಹೊರಗುಳಿಯುತ್ತಿರುವದು ವಿಷಾದ ಎಂದು ಮಡಿಕೇರಿಯ ವೈದ್ಯರಾದ ಬಿ.ಸಿ. ನವೀನ್‍ಕುಮಾರ್ ಅಭಿಪ್ರಾಯಿಸಿದರು.

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ- ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು.

ಮಕ್ಕಳ ಶಿಕ್ಷಣದ ಜವಾಬ್ದಾರಿ ಕೇವಲ ಶಿಕ್ಷಕರದ್ದು ಮಾತ್ರವಲ್ಲ; ಪೋಷಕರಿಗೂ ಸೇರಿದೆ. ಮಾತೃ ಭಾಷೆಯೊಂದಿಗೆ ವಿವಿಧ ಪ್ರಾದೇಶಿಕ, ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಭಾಷಾ ಮಾಧ್ಯಮದಲ್ಲೂ ಶಿಕ್ಷಣ ನೀಡಬೇಕು. ಕೇವಲ ವಿಜ್ಞಾನದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಿಕ್ಷಕರ ಬದ್ಧತೆಯ ಮೇಲೆ ಸಮಾಜ ನಿಂತಿದ್ದು, ಮಕ್ಕಳನ್ನು ಪೆಟ್ಟಿನ ಬದಲು ಪ್ರೀತಿ ವಿಶ್ವಾಸದಿಂದ ಗೆಲ್ಲಬೇಕು ಎಂದರು.

ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಕರ ಹಕ್ಕು ಬಾಧ್ಯತೆಗಳ ರಕ್ಷಣೆಗೆ ಸಂವಿಧಾನದಲ್ಲಿ ಯಾವದೇ ಕಾನೂನುಗಳಿಲ್ಲದಿರುವದು ದುರಂತ. ಅಸಂಘಟಿತವಾಗಿರುವ ಶಿಕ್ಷಕರು ಅಸುರಕ್ಷತೆಯ ಭಾವ ಎದುರಿಸುತ್ತಿದ್ದಾರೆ. ಶಿಕ್ಷಕರು ಇನ್ನಷ್ಟು ಸಂಘಟಿತರಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಮಾತನಾಡಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯದಿಂದ ನೂತನವಾಗಿ ಗುರುಚೇತನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದ್ದು, ಇನ್ನಷ್ಟು ಹೆಚ್ಚಿನ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಶಿಕ್ಷಕರಿಗೆ ದೇಶದಲ್ಲಿ ಅತ್ಯುನ್ನತ ಸ್ಥಾನವಿದ್ದು, ತಮ್ಮ ಘನತೆಯನ್ನು ಉಳಿಸಿಕೊಳ್ಳುವ ಮೂಲಕ ಸಮಾಜ ಸುಧಾರಣೆಯ ಭಾಗವಾಗಬೇಕು. ಮಕ್ಕಳಲ್ಲಿರುವ ಮೌಢ್ಯವನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮೂಡಿಸಬೇಕು ಎಂದರು.

ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಡಯಟ್ ಉಪನ್ಯಾಸಕ ಮಲ್ಲೇಸ್ವಾಮಿ, ತಾ.ಪಂ. ಸದಸ್ಯೆ ತಂಗಮ್ಮ, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಮಹೇಶ್ ಸೇರಿದಂತೆ ಇತರರು ಮಾತನಾಡಿದರು.

ವೇದಿಕೆಯಲ್ಲಿ ಜಿ.ಪಂ. ಸದಸ್ಯರುಗಳಾದ ಪೂರ್ಣಿಮಾ ಗೋಪಾಲ್, ಸರೋಜಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ಮಾಲತಿ, ತೊರೆನೂರು ಗ್ರಾ.ಪಂ. ಸದಸ್ಯ ಕಿಶೋರ್‍ಕುಮಾರ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಲಯ ಉಪಾಧ್ಯಕ್ಷ ಶಿವಕುಮಾರ್, ತಾಲೂಕು ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಬಸವರಾಜು, ಪದಾಧಿಕಾರಿಗಳಾದ ಕವಿತ, ಕೆ.ಡಿ. ನವೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಣ ಇಲಾಖೆಯ ವಿವಿಧ ಸಿಬ್ಬಂದಿಗಳು, ನಿವೃತ್ತ ಶಿಕ್ಷಕರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. 10 ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ತಾಲೂಕಿನ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.