ಮಡಿಕೇರಿ, ಸೆ.7 : ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಂಡುಬಂದಲ್ಲಿ, ಬಾಲಕಾರ್ಮಿಕರ ಪೋಷಕರು ಹಾಗೂ ದುಡಿಸಿಕೊಳ್ಳುವವರ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿನ್ನೆ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂಬದು ಕಾಯ್ದೆ ಇದೆ. ಆದರೂ ಶಾಲೆಯಿಂದ ಮಕ್ಕಳು ಹೊರಗುಳಿಯಲು ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ಪಡೆಯುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

“ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯ, ಸಮವಸ್ತ್ರ, ಮಧ್ಯಾಹ್ನದ ಬಿಸಿ ಊಟ, ಬೈಸಿಕಲ್ ಯೋಜನೆ, ಶೂ ಭಾಗ್ಯ ಹೀಗೆ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹೀಗಿದ್ದೂ ಶಾಲೆಯಿಂದ ಹೊರಗುಳಿಯಲು ಕಾರಣ ಪತ್ತೆ ಹಚ್ಚಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.”

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 202, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 49 ಮಕ್ಕಳು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂಬ ಅಂಕಿಅಂಶ ನೀಡಿದ್ದಾರೆ. ಅದರ ಬಗ್ಗೆ ನಿಖರ ಮಾಹಿತಿ ಪಡೆಯಲು ಸಮೀಕ್ಷೆ ನಡೆಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.