ಸೋಮವರಪೇಟೆ,ಸೆ.7: ವಿಷಪೂರಿತ ಆಹಾರ ಪದಾರ್ಥಗಳ ಬಗ್ಗೆ ಎಲ್ಲರೂ ಜಾಗ್ರತೆ ವಹಿಸಬೇಕು. ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿ¸ Àಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ಎಫ್. ದೊಡ್ಡಮನಿ ಅವರು ಕರೆ ನೀಡಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಸಮೀಪದ ಕೆಂಚಮ್ಮನಬಾಣೆ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೋಷಕಾಂಶಯುಕ್ತ ಆಹಾರಗಳ ಬಗೆಗಿನ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಕೆಲ ರಾಜ್ಯಗಳಲ್ಲಿ ಇಂದಿಗೂ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಇದೆ. ಹಲವಷ್ಟು ಮಂದಿ ಹಸಿವಿನಿಂದಲೂ ಸಾವನ್ನಪ್ಪುತ್ತಿದ್ದಾರೆ. ಇದನ್ನು ಮನಗಂಡ ಸುಪ್ರೀಂ ಕೋರ್ಟ್, ಪೌಷ್ಠಿಕಾಂಶಯುಕ್ತ ಆಹಾರಗಳ ಬಗ್ಗೆ ಜಾಗೃತಿ ಮೂಡಿಸಲು ಸ್ಥಳೀಯ ನ್ಯಾಯಾಲಯಗಳ ಮೂಲಕ ಕಾನೂನು ಅರಿವು ಕಾರ್ಯಾಗಾರ ನಡೆಸುತ್ತಿದೆ ಎಂದ ನ್ಯಾಯಾಧೀಶರು, ಸ್ಥಳೀಯವಾಗಿ ಬೆಳೆಯುವ ಮತ್ತು ಉತ್ತಮ ಪೌಷ್ಠಿಕಾಂಶಗಳನ್ನು ಹೊಂದಿರುವ ಆಹಾರ ಸೇವಿಸಬೇಕು. ಆಹಾರ ಪದಾರ್ಥಗಳನ್ನು ಪರಿಶೀಲಿಸಿ ಬಳಸಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಸಿವಿಲ್ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಮಾತನಾಡಿ, ಹಳೆಯ ಕಾಲದ ಆಹಾರ ಪದ್ಧತಿಗಳನ್ನು ಅನುಸರಿಸಿದರೆ ರೋಗಗಳಿಂದ ಮುಕ್ತವಾಗಬಹುದು. ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಿಂದ ಖರೀದಿಸುವ ಆಹಾರ ಪದಾರ್ಥಗಳಿಗೆ ಮಹತ್ವ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ಎಲ್ಲರಿಗೂ ಪೌಷ್ಠಿಕ ಆಹಾರ ಸಿಗುವಂತಾಗಬೇಕು. ಹುಟ್ಟುವ ಮಗುವಿನಿಂದಲೇ ಗುಣಮಟ್ಟದ ಆಹಾರಕ್ಕೆ ಪ್ರಾಧಾನ್ಯತೆ ನೀಡಬೇಕು. ಭ್ರೂಣಾವಸ್ಥೆಯಲ್ಲಿಯೇ ಪೋಷಕಾಂಶಗಳನ್ನು ಒದಗಿಸಬೇಕು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಹರೀಶ್, ಬಿಳಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ದೇವಕಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.