ಮಡಿಕೇರಿ, ಸೆ. 21: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಅವಧಿಯಲ್ಲಿಯೇ ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳ ಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು. ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸರಕಾರಿ ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಯನ್ನು ಮಾಡಿ ಸಮಾಜಮುಖಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿರುವದು ಶ್ಲಾಘನೀಯ. ಕಾಲೇಜು ಬದುಕಿ ನಲ್ಲಿಯೇ ಸನ್ನಡತೆ, ದೇಶಪ್ರೇಮ, ಸಮಯ ಪಾಲನೆಯನ್ನು ಮೈಗೂಡಿಸಿಕೊಂಡು ಶಿಕ್ಷಕರು ಹಾಗೂ ಪೋಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ.ಕೆ. ಬೋಪಯ್ಯ ಮಾತನಾಡಿ, ವಿದ್ಯಾರ್ಥಿ ಸಂಘಗಳು ವಿದ್ಯಾಥಿಗಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುವ ವೇದಿಕೆಯಾಗಿರುತ್ತದೆ. ವಿದ್ಯಾರ್ಥಿಗಳು ಕಾಲೇಜು ದಿನಗಳಲ್ಲಿಯೇ ಮಾನವೀಯತೆ, ಸಮಯಪ್ರಜ್ಞೆ, ಪರಿಸರ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉಂಟಾಗುತ್ತಿರುವ ಬದಲಾವಣೆಯನ್ನು ಅತ್ಯಂತ ವಿವೇಕದಿಂದ ಸ್ವೀಕರಿಸಿ ಬದುಕನ್ನು ಹಸನಾಗಿಸಬೇಕೆಂದು ಹೇಳಿದರು. ವಿದ್ಯಾರ್ಥಿ ಪ್ರತಿನಿಧಿಗಳು ಪ್ರತಿಜ್ಞೆ ಸ್ವೀಕರಿಸಿದರು.

ಇದೇ ಸಂದರ್ಭ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎಂ. ಭವಾನಿ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ಇತ್ತೀಚೆಗೆ ಬಾಲಕರ ಹಾಗೂ ಬಾಲಕಿಯರ ಕಾಲ್ಚೆಂಡು ಪಂದ್ಯಾವಳಿ ಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಕಾಲೇಜಿನ ಕ್ರೀಡಾಪಟುಗಳಿಗೆ ಪದಕವನ್ನು ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿನಿಯರು ತಿರುವಾದಿರ ನೃತ್ಯ ಹಾಗೂ ನಾಡಗೀತೆಯ ನೃತ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ ವಹಿಸಿದ್ದರು. ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಕೂತಂಡ ಬೋಜಮ್ಮ, ಕುಟ್ಟಂಡ ವಸಂತ್ ಹಾಗೂ ಕುಟ್ಟಂಡ ದೀಪಕ್ ಗಣಪತಿ ಭಾಗವಹಿಸಿದ್ದರು. ವಿದ್ಯಾರ್ಥಿ ತಸ್ಲೀನ ಪ್ರಾರ್ಥಿಸಿ, ಉಪನ್ಯಾಸಕ ಪಿ.ಆರ್. ಶಿವದಾಸ್ ಸ್ವಾಗತಿಸಿದರೆ, ಉಪನ್ಯಾಸಕಿ ಕೆ.ಕೆ. ಸುನಿತಾ ವಂದಿಸಿದರು.