ಸೋಮವಾರಪೇಟೆ, ಸೆ. 25: ವಾಲ್ಮೀಕಿ ಜಯಂತಿಯನ್ನು ಪ್ರಸಕ್ತ ವರ್ಷವೂ ಅರ್ಥಪೂರ್ಣವಾಗಿ ಆಚರಿಸಲು ಇಲ್ಲಿನ ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಲೂಕು ತಹಸೀಲ್ದಾರ್ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಕ್ಟೋಬರ್ 5ರಂದು ಪೂರ್ವಾಹ್ನ 11 ಗಂಟೆಗೆ ಕುಶಾಲನಗರ ಸಮೀಪದ ಮುಳ್ಳುಸೋಗೆ ಗ್ರಾಮದಲ್ಲಿರುವ ವಾಲ್ಮೀಕಿ ಭವನದಲ್ಲಿ ಆಚರಿಸಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮುದಾ ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 8 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಸಮಾಜದ ಓರ್ವ ಸಾಧಕರಿಗೆ ಸನ್ಮಾನ ನಡೆಸುವ ಬಗ್ಗೆ ನಿರ್ಣಯಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖಾಧಿಕಾರಿಗಳೂ ಸಹ ಸಹಕಾರ ನೀಡಬೇಕೆಂದು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಕೃಷಿ ಇಲಾಖಾ ಸಹಾಯಕ ನಿರ್ದೇಶಕ ರಾಜಶೇಖರ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಮುಖ್ಯಾಧಿಕಾರಿ ನಾಚಪ್ಪ, ಜಿ.ಪಂ. ಅಭಿಯಂತರ ಜಯರಾಂ, ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್, ತೋಟಗಾರಿಕಾ ಇಲಾಖೆಯ ಅಧಿಕಾರಿ ಮುತ್ತಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.