ಕೂಡಿಗೆ, ಅ. 2: ಕೇಂದ್ರ ಸರಕಾರವು ಮೂರು ವರ್ಷಗಳ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳು ಎಲ್ಲಾ ಸಾಮಾನ್ಯ ಜನರಿಗೂ ಹಾಗೂ ಬೂತ್ ಮಟ್ಟದ ಗ್ರಾಮಸ್ಥನಿಗೂ ಸಮರ್ಪಕವಾಗಿ ತಲುಪುವಂತಾಗಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಹೆಬ್ಬಾಲೆಯ ನಾಮಧಾರಿ ಸಮುದಾಯ ಭವನದಲ್ಲಿ ನಡೆದ ತಾಲೂಕು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕೇಂದ್ರ ಸರ್ಕಾರದ ಚಿಂತನೆ ಹಾಗೂ ಕಾರ್ಯಗಳು ಬಹು ಮುಖ್ಯವಾಗಿರುತ್ತವೆ. ಅವುಗಳನ್ನು ಅನುಷ್ಠಾನಗೊಳಿಸಲು ಕಾರ್ಯ ಕರ್ತರು ಸನ್ನದ್ಧರಾಗಬೇಕು ಎಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾರತೀಶ್ ಮಾತನಾಡಿ, ಕಾರ್ಯಕರ್ತರುಗಳಿಗೆ ಮುಂದಿನ ದಿನಗಳು ಸವಾಲಿನ ದಿನಗಳಾಗಿದ್ದು, ಚುನಾವಣಾ ದಿನಗಳಾಗುತ್ತಿವೆ. ಕಾರ್ಯಕರ್ತರು ಜವಬ್ದಾರಿಯಿಂದ ಕೆಲಸ ನಿರ್ವಹಿಸಬೇಕೆಂದರು.

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ ವಹಿಸಿದ್ದರು.

ಸಭೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಕಳಗಿ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ಹೆಬ್ಬಾಲೆ ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷ ರಾಜಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.