ಮಡಿಕೇರಿ, ಅ. 4: ಮಡಿಕೇರಿ ದಸರಾ ಉತ್ಸವಕ್ಕೆ ಹೆಚ್ಚಿಗೆ ಅನುದಾನ ಒದಗಿಸುವದು ಸೇರಿದಂತೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದೆ.ವಿಧಾನಪರಿಷತ್ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಗೋಣಿಕೊಪ್ಪ ದಸರಾ ಸಮಿತಿ ಪ್ರಮುಖ ಬಿ.ಎನ್.ಪ್ರಕಾಶ್, ಕಾಂಗ್ರೆಸ್ ವೃತ್ತಿಪರ ಘಟಕದ ಜಿಲ್ಲಾಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಅವರುಗಳು ಸಚಿವರ ಆಪ್ತಸಹಾಯಕರಾದ ಕದ್ದಣಿಯಂಡ ಹರೀಶ್ ಬೋಪಣ್ಣ ಅವರ ಮೂಲಕ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರನ್ನು ವಿಧಾನಸೌಧದಲ್ಲಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದರು. ಈಗಾಗಲೇ ಮಡಿಕೇರಿ ದಸರಾ ವಿಜೃಂಭಣೆಯಿಂದ ಮುಕ್ತಾಯಗೊಂಡಿದ್ದು, ಸರಕಾರದಿಂದ ರೂ. 50 ಲಕ್ಷ ಅನುದಾನ ಮಂಜೂರಾಗಿದೆ.

ಇನ್ನೂ ಹೆಚ್ಚುವರಿ ಅನುದಾನ ಒದಗಿಸಿಕೊಡುವಂತೆ ಮನವಿ ಮಾಡಿದರು. ಅಲ್ಲದೆ ಸದ್ಯದಲ್ಲೇ ಕಾವೇರಿ ತುಲಾಸಂಕ್ರಮಣ ಜಾತ್ರೆ ಬರಲಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕೊರತೆ ಇದ್ದು, ನೇಮಕಾತಿಯೊಂದಿಗೆ ಕಾನೂನು ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದಲ್ಲದೆ ಜಿಲ್ಲೆಯ ಇತರ ಸಮಸ್ಯೆಗಳ ಬಗ್ಗೆಯೂ ಸಚಿವರ ಗಮನೆ ಸೆಳೆದರು. ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆ ನೀಡಿದ್ದಾರೆನ್ನಲಾಗಿದೆ.