ಮಡಿಕೇರಿ, ಅ. 5: ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಾಲ್ಮೀಕಿ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.

ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರನ್ನು ಆದಿಕವಿ, ಮಹಾಕವಿ ಎಂದು ಕರೆಯುತ್ತಾರೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ಜಿ.ಪಂ.ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ಆದರ್ಶ, ಶ್ರದ್ದೆಯನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳು ವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸದಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.

ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ ಇಡೀ ವಿಶ್ವಕ್ಕೆ ರಾಮಾರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮ ವಿದ್ದಲ್ಲಿ ಸಾಧನೆ ಮಾಡಬಹುದು ಎಂಬದನ್ನು ತೋರಿಸಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ ಶ್ರೀರಾಮನನ್ನು ಕುರಿತು ಇಡೀ ಬ್ರಹ್ಮಾಂಡವೇ ಮೆಚ್ಚಿಕೊಳ್ಳುವಂತಹ ರಾಮಾಯಣ ಒಂದು ಅದ್ಬುತ ಗ್ರಂಥವನ್ನು ವಾಲ್ಮೀಕಿ ರಚಿಸಿದರು. ಮಹರ್ಷಿ ವಾಲ್ಮೀಕಿ ರಾಮಾಯಣ ಪ್ರೇರಣೆಯಿಂದಾಗಿ ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು. ದೇಶ-ವಿದೇಶ ಭಾಷೆಗಳಲ್ಲಿಯೂ ರಚಿಸಲ್ಪಟ್ಟ ಮಹಾ ಗ್ರಂಥವಾಗಿದೆ ಎಂದು ತಿಳಿಸಿದರು.

ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ. ನಂಜುಂಡಸ್ವಾಮಿ ಮಾತನಾಡಿ ವಿಶ್ವಕ್ಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದಾರೆ ಎಂದರು.

(ಮೊದಲ ಪುಟದಿಂದ) ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ, ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿವೆ. ಶಾಂತಿ, ಸಹಭಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ವಾಲ್ಮೀಕಿ, ಬುದ್ದ, ಬಸವ, ಕನಕದಾಸ, ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಇವರನ್ನು ಸದಾ ಸ್ಮರಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಮಾತನಾಡಿ ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿಯ ಬದುಕು ಒಂದು ಉತ್ತಮ ನಿದರ್ಶನವಾಗಿದೆ, ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಮಾತನಾಡಿ ಮಾನವಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ನುಡಿದಂತೆ ನಡೆದುಕೊಳ್ಳುವದು ವಾಲ್ಮೀಕಿ ರಾಮಾಯಣದಿಂದ ತಿಳಿದುಬರುತ್ತದೆ ಎಂದರು.

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಕ್ಷಾಯಿಣಿ ಮತ್ತು ಉನ್ನತ ಶಿಕ್ಷಣ ಪಡೆದಿರುವ ಪೂಜಾ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಆಶ್ರಮ ಶಾಲೆಗಳಲ್ಲಿ ಕ್ರೀಡೆ, ಸಾಂಸ್ಕøತಿಕ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಂಜುಂಡೇ ಗೌಡ, ಪೌರಯುಕ್ತೆ ಬಿ.ಶುಭಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ.ಎಂ.ದಾನೋಜಿ, ತಹಶೀಲ್ದಾರ್ ಕುಸುಮ, ತಾ.ಪಂ.ಇಓ ಜೀವನ್ ಕುಮಾರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಕುಮಾರ್, ವಯಸ್ಕರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ ಮತ್ತಿತರರು ಇದ್ದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ.ಪ್ರಕಾಶ್ ಸ್ವಾಗತಿಸಿದರು, ಐಟಿಡಿಪಿ ಇಲಾಖೆಯ ರಂಗನಾಥ್ ನಿರೂಪಿಸಿದರು, ಛಾಯಾ ಮತ್ತು ತಂಡದವರು ನಾಡಗೀತೆ ಹಾಡಿದರು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ ವಂದಿಸಿದರು.

ವೀರಾಜಪೇಟೆ : ತಾನು ತಪ್ಪು ಮಾಡಿದ್ದೇನೆ ಎಂದು ಅರಿತುಕೊಂಡು ಪಶ್ಚತ್ತಾಪದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮಹರ್ಷಿ ವಾಲ್ಮೀಕಿ, ಕಾವ್ಯಗಳು, ಮಹಾ ಕಾವ್ಯಗಳನ್ನು ಬರೆದು ಕಾವ್ಯಗಳ ಸರದಾರ ಎಂದು ಹೆಸರುವಾಸಿಯಾಗಿದ್ದರು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ.ಜೀವನ್ ಹೇಳಿದರು

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ಪೊನ್ನಂಪೇಟೆಯ ತಾಲೂಕು ಪಂಚಾಯಿತ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಜೀವನ್ ವಾಲ್ಮೀಕಿಯ ಕಾವ್ಯಗಳು ಇಂದಿಗೂ ಪ್ರಸ್ತುತ. ಅವರ ಕಾವ್ಯಗಳು ಸಮಾಜಕ್ಕೆ ಕೊಡುಗೆಯಾಗಿವೆ ಎಂದರು.

ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ:ಜೆ.ಸೋಮಣ್ಣ ಅವರು ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು.

ನಾಯಕ ಜನಾಂಗದ ತಾಲೂಕು ಸಮಿತಿ ಅಧ್ಯಕ್ಷ ಸುರೇಶ್ ಮಾತನಾಡಿ ಸರಕಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡುತ್ತಿರುವದು ಜನಾಂಗದವರಿಗೆ ಹೆಮ್ಮೆಯಾಗಿದೆ. ಅದೇ ರೀತಿಯಲ್ಲಿ ಸರಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು. ತಾಲೂಕು ಆಡಳಿತ ಮುಂದಿನ ವರ್ಷದಿಂದ ಬಾಳುಗೋಡಿನಲ್ಲಿರುವ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯನ್ನುದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಸಮಾಜ ಕಲ್ಯಾಣ ಅಧಿಕಾರಿ ಚಂದ್ರಶೇಖರ್ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಮಾತನಾಡಿ ಮಹರ್ಷಿ ವಾಲ್ಮೀಕಿ ಜಗತ್ತಿನ ಮೊದಲ ಕವಿಯಾಗಿದ್ದು ಬೇಟೆಯಾಡಿ ಜೀವನ ನಡೆಸುತ್ತಿದ್ದರೂ ರಾಮಾಯಾಣದ ಗ್ರಂಥ ರಚಿಸಿ ದೇಶಕ್ಕೆ ಹೆಸರುವಾಸಿಯಾದ ಕವಿಯಾಗಿದ್ದರು ಎಂದರು.

ವೇದಿಕೆಯಲ್ಲಿ ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕಿರಣ್ ಪಡ್ನೇಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ.ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

ಕುಶಾಲನಗರ: ಮಹಾನ್ ಪುರುಷರ ತತ್ವ, ಸಿದ್ದಾಂತಗಳು ಸಾರ್ವಕಾಲಿಕವಾಗಿದ್ದು ಎಲ್ಲೆಡೆ ಪ್ರಚುರಪಡಿಸುವ ಮೂಲಕ ಹದಗೆಡುತ್ತಿರುವ ಸಾಮಾಜಿಕ ವ್ಯವಸ್ಥೆಯನ್ನು ಸರಿಪಡಿಸಬಹುದು ಎಂದು ಸೋಮವಾರಪೇಟೆ ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಸ್ಥಳೀಯ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಕುಲದ ಉದ್ದಾರಕ್ಕೆ, ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಮಾಡಿದ ಮಹಾನ್ ಪುರುಷರ ಜಯಂತಿ ಆಚರಣೆ ಕಾರ್ಯಕ್ರಮಗಳು ಕೇವಲ ಒಂದು ವರ್ಗಕ್ಕೆ ಸೀಮಿತಗೊಳ್ಳದೆ ಎಲ್ಲಾ ವರ್ಗದವರು ಆಚರಿಸುವಂತಾಗಬೇಕು ಎಂದು ಅವರು ಕರೆ ನೀಡಿದರು.

ಸೋಮವಾರಪೇಟೆ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ಉಪನ್ಯಾಸಕ ಡಾ.ಮಹಂತೇಶ್ ಪಟೇಲ್ ಮುಖ್ಯ ಭಾಷಣ ಮಾಡಿದರು. ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಎಂ.ಜಿ.ರಾಜು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅತಿ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮೋಕ್ಷಿತ್ ಕಲಾ ತಂಡದಿಂದ ವಾಲ್ಮೀಕಿ ಗೀತ ಗಾಯನ ನಡೆಯಿತು.

ಕೊಡಗು ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಆರ್. ಮಂಜುಳಾ, ತಾಲೂಕು ಪಂಚಾಯ್ತಿ ಸದಸ್ಯೆ ಪುಷ್ಪಾ ಜನಾರ್ದನ್, ಮುಳ್ಳುಸೋಗೆ ಗ್ರಾಮಪಂಚಾಯ್ತಿ ಅಧ್ಯಕ್ಷೆ ಭವ್ಯ, ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ತಾಲೂಕು ತಹಶೀಲ್ದಾರ್ ಪಿ.ಎಸ್.ಮಹೇಶ್, ಪೊಲೀಸ್ ಉಪ ಅಧೀಕ್ಷಕ ಸಿ. ಸಂಪತ್‍ಕುಮಾರ್, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶೋಕ್ ಮತ್ತಿತರರು ಇದ್ದರು.

ಚೈತ್ರ ಮತ್ತು ತಂಡ ಪ್ರಾರ್ಥಿಸಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಎ.ರಾಮೇಗೌಡ ಸ್ವಾಗತಿಸಿದರು.