ಮಡಿಕೇರಿ, ಅ. 6: ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು.ಕಚ್ಚಾತೈಲ ಬೆಲೆ ಕಡಿತಗೊಂಡಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆ ಮಾಡಿಲ್ಲ. ದಿನಸಿ ವಸ್ತುಗಳ ಬೆಲೆಯೂ ಗಗನಕ್ಕೇರಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆಯಲ್ಲಿ ತೆರಳಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ಹಾಗೂ ಇನ್ನಿತರರು ಇದ್ದರು.