ಮಡಿಕೇರಿ, ಅ. 6 : ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕಿದೆ ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಗರಸಭೆ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಣ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿ ಕಾಣಲು ಸಾಧ್ಯ. ಆದ್ದರಿಂದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಪೌರ ಕಾರ್ಮಿಕರು ಕಠಿಣ ಪರಿಸ್ಥಿತಿ ಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರ ಪೌರ ಕಾರ್ಮಿಕರಿಗಾಗಿ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಪೌರ ಕಾರ್ಮಿಕರಿಗೆ ಈಗಾಗಲೇ ನಿವೇಶನ ಗುರುತಿಸಿ ಹಂಚಿಕೆ ಮಾಡಲಾಗಿದೆ. ಬೆಳಗ್ಗಿನ ಉಪಾಹಾರ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಹಾಗೆಯೇ ಮೂರು ತಿಂಗಳಿಗೊಮ್ಮೆಯಾದರೂ ಕುಟುಂಬದ ಸದಸ್ಯರಿಗೆ ಆರೋಗ್ಯ ಶಿಬಿರ ಆಯೋಜಿಸಬೇಕು.
ಪೌರ ಕಾರ್ಮಿಕರು ಒಂದು ದಿನ ಕಾರ್ಯನಿರ್ವಹಿಸದಿದ್ದರೆ ನಗರ ಮತ್ತು ಪಟ್ಟಣಗಳ ಪರಿಸ್ಥಿತಿ ಊಹಿಸಿಕೊಳ್ಳುವದು ಅಸಾಧ್ಯ. ಆದ್ದರಿಂದ ಪೌರ ಕಾರ್ಮಿಕರ ಕೆಲಸದ ಮಹತ್ವ ತಿಳಿಯಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಪೌರ ಕಾರ್ಮಿಕರ ಜೊತೆ ಇತರರು ಕೈಜೋಡಿಸಿದ್ದಲ್ಲಿ ನಗರ ಮತ್ತು ಪಟ್ಟಣಗಳಲ್ಲಿ ಶುಚಿತ್ವ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಸ್ವಚ್ಛತೆಗೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕಿದೆ.
ಪೌರ ಕಾರ್ಮಿಕರನ್ನು ಗೌರವಿಸಿದಲ್ಲಿ ಇತರರನ್ನು ಗೌರವಿಸಿದಂತಾಗುತ್ತದೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗುವಂತಾಗಬೇಕು. ಪೌರ ಕಾರ್ಮಿಕರು ಸ್ವಾಭಿಮಾನದಿಂದ ಬದುಕುವಂತಾಗಬೇಕು. ಆ ನಿಟ್ಟಿನಲ್ಲಿ