ವೀರಾಜಪೇಟೆ, ಅ. 7: ಪರಿಸರ ಹಾಗೂ ಸ್ವಚ್ಛತೆಯನ್ನು ಕಾಪಾಡುವದರ ಮೂಲಕ ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು ಎಂದು ಕಾಕೋಟುಪರಂಬು ಗ್ರಾಮ ಪಂಚಾಯಿತಿ ಸದಸ್ಯ ಮಂಡೇಟ್ಟಿರ ಅನಿಲ್ ಅಯ್ಯಪ್ಪ ಹೇಳಿದರು.

ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಪಾಕ್ಷಿಕ ಹಾಗೂ ಪೌಷ್ಟಿಕ ಆಹಾರ ಸಪ್ತಾಹದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ನಮ್ಮ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಮನೋಭಾವನೆ ನಮ್ಮ ಮನಸ್ಸಿನಲ್ಲಿ ಬಂದರೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಸಾಧ್ಯವಾಗುತ್ತದೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಚಿಕ್ಕ ಮಕ್ಕಳಿಗೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗವನ್ನು ಎಲ್ಲರೂ ಬಳಸಿಕೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಕಾಕೋಟುಪರಂಬು ಗ್ರಾಮ ಪಂಚಾಯತಿ ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷೆ ಕಾವೇರಮ್ಮ, ಗ್ರಾಮಸ್ಥರಾದ ಪಿ.ಟಿ. ರಮೇಶ್ ಮತ್ತಿತರರು ಉಪಸ್ಥಿತರಿದ್ದರು. ಶುಶ್ರೂಷಕಿ ವನಿತಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ನಂತರ ಆಶಾ ಕಾರ್ಯಕರ್ತರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಆಸ್ಪತ್ರೆಯ ಸುತ್ತಮುತ್ತ ಕಾಡು ಕಡಿಯುವದರ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡರು.